ಆ. 3ರಂದು ಪುನಶ್ಚೇತನ ಕಾರ್ಯಾಗಾರ
ಹಾಸನ: ನೆಹರು ಯುವ ಕೇಂದ್ರದ ರಾಷ್ಟ್ರೀಯ ಸೇವಾ ಕಾರ್ಯಕರ್ತರು ಹಾಗೂ ಯುವ ಪಡೆ ಕಾರ್ಯಕರ್ತರಿಗೆ ಒಂದು ದಿನದ ಪುನಶ್ಚೇತನ ಕಾರ್ಯಗಾರವನ್ನು ಆ. 3ರಂದು ಹಮ್ಮಿಕೊಳ್ಳಲಾಗಿದೆ ಎಂದು ನೆಹರು ಯುವ ಕೇಂದ್ರದ ರಾಷ್ಟ್ರೀಯ ಸೇವಾ ಕಾರ್ಯಕರ್ತ ಬಿ.ಆರ್. ಗಿರೀಶ್ ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಆವರಣದಲ್ಲಿ ಕಾರ್ಯಗಾರ ನಡೆಯಲಿದ್ದು, ನೆಹರು ಯುವ ಕೇಂದ್ರದ ರಾಷ್ಟ್ರೀಯ ಸೇವಾ ಕಾರ್ಯಕರ್ತರು ಹಾಗೂ ಯುವ ಪಡೆ ಕಾರ್ಯಕರ್ತರನ್ನು ಒಂದೆಡೆ ಸೇರಿಸುವ ಮೂಲಕ ಅವರಿಗೆ ದೇಶದ ಅಭಿವೃದ್ಧಿಗೆ ಶ್ರಮಿಸುವಂತೆ ಮನ ಒಲಿಸುವ ಸಲುವಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಗ್ರಾಮೀಣ ಭಾಗದಲ್ಲಿರುವ ಕುಡಿಯುವ ನೀರು, ರಸ್ತೆ, ವಿದ್ಯುತ್, ಒಳಚರಂಡಿ ಸಮಸ್ಯೆಗಳ ನಿವಾರಣೆಯ ಬಗ್ಗೆ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಲಾಗುವುದು ಎಂದು ಹೇಳಿದರು. ಕಾರ್ಯಾಗಾರದಲ್ಲಿ ಕೃಷಿ, ತೋಟಗಾರಿಕಾ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಂದ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಾಗಾರಕ್ಕೆ ರಾಜ್ಯದ ನಾನಾ ಜಿಲ್ಲೆಯ ರಾಷ್ಟ್ರೀಯ ಸೇವಾ ಕಾರ್ಯಕರ್ತರು, ಯುವ ಪಡೆ ಕಾರ್ಯಕರ್ತರು, ಎಕ್ಸ್ಎನ್ಎಸ್ವಿ ಮತ್ತು ಎನ್ವೈಸಿ ಕಾರ್ಯಕರ್ತರು ಆಗಮಿಸಲಿದ್ದು, ಸುಮಾರು 500 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.