ಹೈಕೋರ್ಟ್ ಅನುಮತಿ
ಬೆಂಗಳೂರು: ದಕ್ಷಿಣ ಕನ್ನಡ ಭಾಗದ ನೇತ್ರಾವತಿ ಸೇರಿದಂತೆ ನದಿಗಳ ತಿರುವು ಬದಲಾಯಿಸಿ ಬರಪೀಡಿತ ಪ್ರದೇಶಗಳಿಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ತಡೆಯಾಜ್ಞೆ ಕೋರಿ ರಾಷ್ಟ್ರೀಯ ಹಸಿರು ಪ್ರಾಧಿಕಾರದ ಮುಂದೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ. ಎತ್ತಿನಹೊಳೆ ಯೋಜನೆಯಿಂದ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶಕ್ಕೆ ಹಾನಿಯುಂಟಾಗಲಿದೆ. ಈ ಯೋಜನೆಗೆ ಮುನ್ನ ಸರ್ಕಾರ ಕಾನೂನು ಪ್ರಕಾರ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಅನುಮತಿ ಪಡೆದಿಲ್ಲ ಎಂದು ಆರೋಪಿಸಿ ಕೆ.ಎನ್.ಸೋಮಶೇಖರ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಆದರೆ, ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದ ಮುಖ್ಯ ನ್ಯಾ.ಡಿ.ಎಚ್.ವಘೇಲ ಹಾಗೂ ನ್ಯಾ.ಎಚ್.ಜಿ.ರಮೇಶ್ ಅವರಿದ್ದ ವಿಭಾಗೀಯ ಪೀಠ, ಅಗತ್ಯವಿದ್ದಲ್ಲಿ ಸೂಕ್ತ ಪ್ರಾಧಿಕಾರದ ಮುಂದೆ ಅರ್ಜಿ ಸಲ್ಲಿಸುವಂತೆ ಸೂಚಿಸಿತು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ಅರ್ಜಿಯನ್ನು ಹಿಂಪಡೆದರು. ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಗಳಲ್ಲಿ ಹರಿಯುವ ನೇತ್ರಾವತಿ ಸೇರಿದಂತೆ ಆರು ನದಿಗಳ ತಿರುವು ಬದಲಾಯಿಸಿ ಮಧ್ಯ ಕರ್ನಾಟಕದ 5 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಪ್ರದೇಶಗಳಿಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾನೂನುಬದ್ಧವಾಗಿಲ್ಲ. ಯೋಜನೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಪರಿಸರ ಇಲಾಖೆಯ ಅನುಮತಿ ಪಡೆದಿಲ್ಲ. ಆದ್ದರಿಂದ ಯೋಜನೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.