ಕುಡಿಯುವ ನೀರಿಗೆ ಆಗ್ರಹ
ಅರಸೀಕೆರೆ: ತಾಲೂಕಿನ ಕಣಕಟ್ಟೆ ಹೋಬಳಿಯ ಕರಡಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ತಾಲೂಕು ಆಡಳಿತ ಸೂಕ್ತ ಕ್ರಮಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.
ತಾಲೂಕಿನ ಕರಡಿಹಳ್ಳಿ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಗ್ರಾಮದಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಸರಬರಾಜು ಆಗದ ಕಾರಣ ನೀರಿಗಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಕ್ಷೇತ್ರದ ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಸಮಸ್ಯೆ ಪರಿಹರಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ತಾಳಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಬಸವಲಿಂಗಪ್ಪ ಮಾತನಾಡಿ, ಕಲ್ಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಜನತೆ ಪರಿತಪಿಸುತ್ತಿದ್ದಾರೆ. ಈ ಹಿಂದೆ ಕೊರೆಸಿದ ಕೊಳವೆ ಬಾವಿಗಳು ಬತ್ತಿ ಹೊಗಿದ್ದು ಹೊಸದಾಗಿ ಕೊಳವೆ ಬಾವಿಗಳನ್ನು ಅಧಿಕಾರಿಗಳು ಕೊರೆಸಲು ಮುಂದಾಗ ಬೇಕೆಂದು ಅನೇಕ ಬಾರಿ ಮನವಿ ಮಾಡಿದರೂ ಇವರೆಗೂ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ದೂರಿದರು.
ತಾಲೂಕಿನಾದ್ಯಂತ ನೂತನ ಕೊಳವೆ ಬಾವಿಗಳನ್ನು ಕೊರೆಯುತ್ತಿರುವ ಗುತ್ತಿಗೆದಾರರಿಗೆ ಸುಮಾರು ಒಂದು ಕೋಟಿಗೂ ಹೆಚ್ಚು ಹಣವನ್ನು ಸರ್ಕಾರ ಬಾಕಿ ಉಳಿಸಿಕೊಂಡಿರುವ ಕಾರಣ ನೂತನ ಕೊಳವೆ ಬಾವಿಗಳನ್ನು ಕೊರೆಸಲು ಸಾಧ್ಯವಾಗುತ್ತಿಲ್ಲ. ಆದಕಾರಣ ಕೂಡಲೇ ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ಕರಡಿಹಳ್ಳಿ ಗ್ರಾಮಕ್ಕೆ ನೂತನ ಕೊಳವೆ ಬಾವಿಗಳನ್ನು ಕೊರೆಸಿಕೊಡಬೇಕು ಎಂದು ಒತ್ತಾಯಿಸಿದರು. ನಂತರ ಪ್ರತಿಭಟನಾಕಾರರು ತಾಪಂ ಕಾರ್ಯನಿರ್ವಹಣಾಧಿಕಾರಿ ಟಿ.ಎನ್. ಮೂರ್ತಿ ಅವರಿಗೆ ಮನವಿ ಪತ್ರವನ್ನು ಅರ್ಪಿಸಿದರು.
ತಾಪಂ ಇಓ ಭರವಸೆ: ಶಾಸಕರ ಅಧ್ಯಕ್ಷತೆಯಲ್ಲಿ ಶನಿವಾರ ಸಭೆ ಕರೆಯಲಾಗಿದ್ದು. ಈ ಸಭೆಯಲ್ಲಿ ಕರಡಿಹಳ್ಳಿ ಗ್ರಾಮಕ್ಕೆ ಹೊಸದಾಗಿ ಕೊಳವೆ ಬಾವಿಗಳನ್ನು ತೆಗೆಸಲು ನಿರ್ಣಯವನ್ನು ಅಂಗೀಕರಿಸಲಾಗುವುದು ಅಲ್ಲಿಯವರೆಗೂ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರನ್ನು ಗ್ರಾಮಕ್ಕೆ ಪೂರೈಸಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ರೈತಸಂಘದ ತಾಲೂಕು ಅಧ್ಯಕ್ಷ ಮೇಳೇನಹಳ್ಳಿ ನಾಗರಾಜು, ಗ್ರಾಮಸ್ಥರಾದ ಚಂದ್ರಶೇಖರ. ಹೊಸಳ್ಳಿ ಬಸವಲಿಂಗಪ್ಪ, ರವಿಕುಮಾರ್, ಸುರೇಶ, ಉಮಾದೇವಿ, ಇಂದ್ರಮ್ಮ ಸದಾಶಿವ, ನಂಜುಂಡಪ್ಪ ಸೇರಿದಂತೆ ಇದ್ದರು.