'ಶೀಘ್ರವಾಗಿ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಿ'
ಹೊಳೆನರಸೀಪುರ: ರಾಷ್ಟ್ರೀಯ ಲೋಕ ಅದಾಲತ್‌ನ ಮೂಲಕ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಏ.12ರವರೆಗೆ ಲೋಕ ಅದಾಲತ್ ನಡೆಸಲಿದ್ದು, ಜನತಾ ನ್ಯಾಯಾಲಯದ ಮೂಲಕ ಬಾಕಿ ಉಳಿದಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಡಿ. ಕಂಬೇಗೌಡ ತಿಳಿಸಿದರು.
ಈ ಕುರಿತಂತೆ ಮಾಹಿತಿ ನೀಡಿದ ಅವರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಸರ್ವೋಚ್ಛ ನ್ಯಾಯಾಲಯದಿಂದ ತಾಲೂಕು ನ್ಯಾಯಾಲಯದವರೆಗೆ ಪ್ರಕರಣಗಳ ಇತ್ಯರ್ಥಕ್ಕಾಗಿ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಲೋಕ ಅದಾಲತ್‌ನ ಮೂಲಕ ಜನತಾ ನ್ಯಾಯಾಲಯದಲ್ಲಿ ವಕೀಲರ ಮೂಲಕವಾಗಲೀ, ಅಥವಾ ನೇರವಾಗಿ ಭಾಗಿಯಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ ಎಂದರು.
ವಿವಾದಗಳು ಇತ್ಯರ್ಥ: ಈ ಹಿಂದಿನ ಲೋಕ ಅದಾಲತ್‌ನಲ್ಲಿ ಹಲವಾರು ವಿವಾದಗಳನ್ನು ಸೂಕ್ತವಾಗಿ ಇತ್ಯರ್ಥಗೊಳಿಸಿದ ಪರಿಣಾಮವಾಗಿ ಸಿಕ್ಕ ಉತ್ತಮ ಪ್ರತಿಕ್ರಿಯೆಯಿಂದ ಮತ್ತೊಮ್ಮೆ ರಾಷ್ಟ್ರೀಯ ಲೋಕ ಅದಾಲತ್ತನ್ನು ಹಮ್ಮಿಕೊಳ್ಳಲಾಗಿದ್ದು, ಜನತಾ ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡುವುದಲ್ಲದೇ, ಸೌಹಾರ್ಧಯುತವಾಗಿ ಪ್ರಕರಣ ಇತ್ಯರ್ಥಗೊಳ್ಳುವುದರಿಂದ ಬಾಂಧವ್ಯ ಉಳಿದು ವಿವಾದ ಇತ್ಯರ್ಥಗೊಳ್ಳಲಿದೆ ಎಂದು ಅವರು ತಿಳಿಸಿದರು. ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸದುಪಯೋಗಪಡಿಸಿಕೊಳ್ಳಬೇಕು: ಲೋಕ ಅದಾಲತ್‌ನ ಜನತಾ ನ್ಯಾಯಾಲಯದ ಮೂಲಕ ಪ್ರಕರಣವನ್ನು ಇತ್ಯರ್ಥ್ಥಗೊಳಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಎಂದ ಅವರು, ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಕಡಿಮೆ ಖರ್ಚು ಮತ್ತು ಶೀಘ್ರ ವಿಲೇವಾರಿಯ ಮೂಲಕ ಇತ್ಯರ್ಥಗೊಳಿಸಿಕೊಳ್ಳಲು ಸಿಕ್ಕಿರುವ ಸದಾವಕಾಶವನ್ನು ಅರ್ಹರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ನ್ಯಾಯಾಧೀಶರಾದ ಡಿ. ಕಂಬೇಗೌಡ ತಿಳಿಸಿದರು. ಸಹಾಯಕ ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡರ್ ಹಾಗೂ ಯೋಗೇಶ್ ಇದ್ದರು.