'ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಮೌಲ್ಯ ತಿಳಿಸಿ'
ಹಾಸನ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಮಾನವೀಯ ಮೌಲ್ಯಗಳನ್ನು ತಿಳಿಸಿಕೊಡಬೇಕಾದ ಜವಾಬ್ದಾರಿ ಶಾಲೆಗಳ ಮೇಲೆ ಇದೆ ಎಂದು ಶಾಸಕ ಎಚ್.ಎಸ್. ಪ್ರಕಾಶ್ ತಿಳಿಸಿದರು.
ಹಾಸನದ ಟೈಮ್ಸ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಸಾಮಾಜಿಕ ಮೌಲ್ಯಗಳ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು.
ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಸಲುವಾಗಿ ಪೋಷಕರು ಹಾಗೂ ಶಿಕ್ಷಕರು ಕ್ರಮವಹಿಸಬೇಕು. ದೇಶದ ಮಹಾನ್ ನಾಯಕರ ಸಾಧನೆ ಹಾಗೂ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶಿಕ್ಷಕರು ತಿಳಿ ಹೇಳಬೇಕು ಎಂದು ನುಡಿದರು.
ಯುವಕರನ್ನು ಸಜ್ಜುಗೊಳಿಸಿ: ಟೈಮ್ಸ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗಂಗಾಧರ್, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರ ಪ್ರತಿಭೆಯನ್ನು ಗುರುತಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು ಹಾಗೂ ಸಮಾಜಕ್ಕೆ ಮಾದರಿ ಯುವಕರನ್ನು ಸಜ್ಜುಗೊಳ್ಳಿಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.
ಶಾಲೆಯ ಮುಖ್ಯ ಶಿಕ್ಷಕ ಉಮಾ ಎಸ್. ಪಾಟೀಲ್ ಮಾತನಾಡಿ, ನಮ್ಮ ಶಾಲೆಯಲ್ಲಿ ಪಠ್ಯದ ಜೊತೆಗೆ ಮಕ್ಕಳಿಗೆ ಉಪಯುಕ್ತವಾಗುವಂತಹ ಕಾರ್ಯಕ್ರಮಗಳನ್ನು ನೆಡಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಅಮೋಘ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಕೆ.ಪಿ.ಎಸ್. ಪ್ರಮೋದ್, ಟೈಮ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುರೇಂದ್ರ ಇತರರು ಇದ್ದರು.