'ಮತದಾನ ಪ್ರತಿ ಪ್ರಜೆಯ ಕರ್ತವ್ಯ'
ಅರಕಲಗೂಡು: ದೇಶ ಇಡೀ ವಿಶ್ವದಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿದ್ದು,ಮತದಾನ ಮಾಡಲು ಅರ್ಹನಾಗಿರುವ ಪ್ರತಿಯೊಬ್ಬ ನಾಗರಿಕನೂ ಕೂಡ ಮತದಾನದಲ್ಲಿ ಪಾಲ್ಗೊಳ್ಳಬೇಕಿದೆ ಎಂದು ವಿಧಾನಸಭಾ ವ್ಯಾಪ್ತಿಯ ಚುನಾವಣಾಧಿಕಾರಿ ಜಗದೀಶ್ ಕುಮಾರ್ ತಿಳಿಸಿದರು.
ತಹಸೀಲ್ದಾರ್ ಕಚೇರಿ ಮುಂಭಾಗ ಗೊರೂರು ಎ.ಎನ್.ವಿ. ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ ಚುನಾವಣಾ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡುತ್ತಾ,ಮತದಾನ ಮಾಡುವ ಮೂಲಕ ದೇಶದ ಉನ್ನತಿಗೆ ನೆರವಾಗುವ ಜತೆಗೆ ಸುಭದ್ರ ಸರಕಾರ ನಡೆಸುವ ಪ್ರತಿನಿಧಿನಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ನಮ್ಮದಾಗಿರುತ್ತದೆ ಎಂದು ಹೇಳಿದರು.
ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವತಿಯಿಂದ ಅರಕಲಗೂಡು ವಿಧಾನ ಸಭಾ ವ್ಯಾಪ್ತಿಯಲ್ಲಿ ಚುನಾವಣಾ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವುದು ಮೆಚ್ಚುಗೆಯ ಸಂಗತಿ ಎಂದರು.
ತಹಸೀಲ್ದಾರ್ ಬಸವರಾಜು, ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಬಸವರಾಜು, ಜಾಥಾ ಸಂಚಾಲಕ ಧರ್ಮೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ವಿದ್ಯಾರ್ಥಿಗಳು ಮೋಟಾರ್ ಬೈಕ್‌ನಲ್ಲಿ ಜಾಗೃತಿ ಜಾಥಾ ಕೈಗೊಂಡರು.