ಕಾಂಗ್ರೆಸ್ ಅಭ್ಯರ್ಥಿಗೆ ದಸಂಸ ಬೆಂಬಲ
ಅರಕಲಗೂಡು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಲಿತ ಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದಲಿತ ಸಮುದಾಯ ಬೆಂಬಲಿಸಲಿದೆ ಎಂದು ಸಮಿತಿಯ ಜಿಲ್ಲಾ ಮುಖಂಡರಾದ ಟಿ.ವಿ. ಶಿವರಾಮಯ್ಯ ಮತ್ತು ಗಣೇಶ್ ವೇಲಾಪುರಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಿಂದ ಸಾಲ ಪಡೆದಿದ್ದ ದಲಿತ, ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಸಮುದಾಯದವರ ಎಲ್ಲಾ ವಿಧದ ಸಾಲ ಮತ್ತು ಬಡ್ಡಿ ಸಂಪೂರ್ಣ ಮನ್ನಾ ಮಾಡುವ ಮೂಲಕ ದಲಿತರ ಹಿತ ಕಾಯುವ ಕೆಲಸ ಮಾಡಿದ್ದಾರೆ ಎಂದರು. ಬಿಎಸ್ಪಿ ಜಿಲ್ಲಾಧ್ಯಕ್ಷ ಬಿ.ಸಿ. ರಾಜೇಶ್ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ. ಮಂಜು ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವುದನ್ನು ದಲಿತ ಸಂಘರ್ಷ ಸಮಿತಿ ಖಂಡಿಸಿದೆ.
ಶಾಸಕ ಎ. ಮಂಜು ಅವರು ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸಿ ದಲಿತರ ಭಾವನೆಗಳಿಗೆ ಸ್ಪಂಧಿಸಿದ್ದಾರೆ. ದಲಿತರು ಎಂದೂ ಬಿ.ಸಿ. ರಾಜೇಶ್ ಅವರನ್ನು ಒಪ್ಪಿಕೊಂಡಿಲ್ಲ ಎಂದರು. ಗೋಷ್ಠಿಯಲ್ಲಿ ಲಕ್ಷಣ್, ಸಣ್ಣಸ್ವಾಮಿ, ಕಾಂತರಾಜು ಇದ್ದರು.