'ವಿದ್ಯೆ ಕಲಿಸುವುದು ಶ್ರೇಷ್ಠ ವೃತ್ತಿ'
ಅರಸೀಕೆರೆ: ಮಕ್ಕಳಿಗೆ ವಿದ್ಯೆ ಕಲಿಸುವುದು ಶ್ರೇಷ್ಠವಾದ ವೃತ್ತಿಯಾಗಿದ್ದು ಅದನ್ನು ಸಮರ್ಥವಾಗಿ ನಿಭಾಯಿಸಿದಾಗ ಜನರಿಂದ ಯಾವ ರೀತಿ ಮನ್ನಣೆ ಸಿಗುತ್ತದೆ ಎಂಬುದಕ್ಕೆ ಈ ಸಮಾರಂಭ ಸಾಕ್ಷಿಯಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
ಪಟ್ಟಣದ ಹಾಸನ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಅಕ್ಷರ ದಾಸೋಹ ಕೊಠಡಿ ಹಾಗೂ ಹೆಚ್ಚುವರಿ ಶಾಲಾ-ಕೊಠಡಿಗಳನ್ನು ಗುರುವಾರ ಉದ್ಘಾಟಿಸಿದ ನಂತರ, ನಿವೃತ್ತರಾದ ಮುಖ್ಯೋಪಾಧ್ಯಾಯ ಅಡವಿಸ್ವಾಮಿ ಅವರನ್ನು ಗೌರವಿಸಿ ಮಾತನಾಡಿದರು.
ಶ್ಲಾಘನೀಯ: ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರವಾಗುತ್ತಿರುವ ಇಂದಿನ ದಿನಗಳಲ್ಲಿ ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆಯಿಲ್ಲದ ರೀತಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಸರ್ಕಾರಿ ಶಾಲೆಯತ್ತ ಆಕರ್ಷಿಸಿ ಶಾಲೆಯನ್ನ ಅಭಿವೃದ್ಧಿ ಪಥದತ್ತ ಕೊಂಡೊಯ್ದಿರುವ ಶಿಕ್ಷಕ ಕೆ.ಎನ್. ಅಡವಿಸ್ವಾಮಿ ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿ ಯಶಸ್ವಿಯಾಗಿರುವುದು ಶ್ಲಾಘನೀಯ ಸಂಗತಿ ಎಂದರು.
ಶಿಕ್ಷಕರಿಗೆ ಕರೆ: ದೇಶದ ಶಿಕ್ಷಣ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳು ಹತ್ತು ಹಲವು ಯೋಜನೆಗಳನ್ನ ರೂಪಿಸಿದ್ದು ಇದನ್ನ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸುವಂತೆ ಶಿಕ್ಷಕರಿಗೆ ಕರೆ ನೀಡಿದರು.
ಸರಕಾರದ ನಾನಾ ಯೋಜನೆಗಳ ಮೂಲಕ ಸೀಗುವ ಸವಲತ್ತುಗಳನ್ನ ಮಂಜೂರು ಮಾಡಿಸಿಕೊಂಡು ಬರುವ ಮೂಲಕ ತಾಲೂಕಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ನಿಟ್ಟಿನಲ್ಲಿ ಶಾಸಕರು ಶ್ರಮಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ಮೋಹನ್ ಕುಮಾರ್ ಪ್ರಶಂಸಿಸಿದರು.
ಇದೇ ಸಂದರ್ಭದಲ್ಲಿ ನಿವೃತ್ತರಾದ ಶಾಲೆಯ ಮುಖ್ಯ ಶಿಕ್ಷಕ ಕೆ.ಎನ್.ಅಡವಿಸ್ವಾಮಿಯವರಿಗೆ ಶಾಸಕ ಶಿವಲಿಂಗೇಗೌಡ ಸೇರಿದಂತೆ ಶಾಲೆಯ ಸಹ ಶಿಕ್ಷಕರು ಹಾಗೂ ನಾನಾ ಸಂಘ ಸಂಸ್ಥೆಗಳ ವತಿಯಿಂದ ವೇದಿಕೆಯ ಮೇಲೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾಪಂ ಅಧ್ಯಕ್ಷೆ ಹೇಮಾವತಿ ಮಾಜಿ ಅಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಉಪನ್ಯಾಸಕ ಶ್ಯಾಮಸುಂದರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ನಟರಾಜು, ಪುರಸಭೆಯ ಸದಸ್ಯ ನಾಸೀರ್, ಹಿರಿಯ ಕ್ರೀಡಾಪಟು ಎಚ್.ಟಿ. ಮಹದೇವ್, ಪುರಸಭೆ ಮಾಜಿ ಉಪಧ್ಯಕ್ಷ ಶಾಂತರಾಜು, ತಾಲೂಕು ನೌಕರರ ಸಂಘದ ಅಧ್ಯಕ್ಷ ಸೋಮಶೇಖರಯ್ಯ, ಶಿಕ್ಷಕರಾದ ನಾಗೇಶ್, ಮೋತಿಲಾಲ್ ನಾಯ್ಕ ಮತ್ತಿತರು ಇದ್ದರು.