ಸೆಸ್ಕ್ ನೆತ್ತಿ ಮೇಲೆ ತೂಗುಗತ್ತಿ
ಕ.ಪ್ರ.ವಾರ್ತೆ , ಹಾಸನ , ಮೇ 6
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕೊಳವೆಬಾವಿಗಳ ಸಿವಿಲ್ ಕಾಮಗಾರಿ ಪೂರ್ಣಗೊಂಡಿದ್ದರೂ ವಿದ್ಯುತ್ ಸಂಪರ್ಕ ನೀಡುವಲ್ಲಿ ವಿಳಂಬ ಮಾಡಿರುವ ಸೆಸ್ಕ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಕುಮಾರ್ ನಾಯಕ್, ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯ್ತಿ ಹೊಯ್ಸಳ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬೇಸಿಗೆ ಪ್ರಾರಂಭವಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಇದನ್ನು ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಅಲ್ಲದೇ ಸಮಸ್ಯೆ ಬಗೆಹರಿಸಲು ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಸಭೆಗೆ ಸರಿಯಾಗಿ ಮಾಹಿತಿ ನೀಡದ ಕಾರಣ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಗಂಭೀರವಾಗಿ ಪರಿಗಣಿಸಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಕೊಳವೆ ಬಾವಿ ಆಳಗೊಳಿಸುವುದು ಮತ್ತು ಸ್ವಚ್ಛಗೊಳಿಸಲು ಕೈಗೊಂಡಿರುವ ಕಾಮಗಾರಿಗಳನ್ನು ಸರಿಯಾದ ಸಮಯಕ್ಕೆ ಮಾಡದ್ದರೆ ಜನತೆ ತೊಂದರೆ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿ ಕಾಮಗಾರಿಗಳನ್ನು ಪರಿಶೀಲಿಸುವಂತೆ ಜಿಪಂ ಸಿಇಒಗೆ ಸೂಚನೆ ನೀಡಿದರು.
ಎಷ್ಟು ಕೊಳವೆ ಬಾವಿಗಳನ್ನು ಆಳಗೊಳಿಸಲಾಗಿದೆ, ಎಷ್ಟು ಅಡಿ ಆಳಗೊಳಿಸಲಾಗಿದೆ, ಯಾವ ಹಂತದಲ್ಲಿದೆ ಎಂಬಿತ್ಯಾದಿ ಮಾಹಿತಿ ಸಂಬಂಧಪಟ್ಟ ಎಂಜಿನಿಯರ್ಗಳು ಸಭೆಗೆ ಸ್ಪಷ್ಟ ಮಾಹಿತಿ ನೀಡಬೇಕು. ಕೊಳವೆ ಬಾವಿಗಳ ಸಿವಿಲ್ ಕಾಮಗಾರಿ ಪೂರ್ಣಗೊಂಡಿದ್ದು ಕೇವಲ ವಿದ್ಯುತ್ ಸಂಪರ್ಕಕ್ಕಾಗಿ ವಿಳಂಬ ಮಾಡಿದರೆ ಜನತೆ ನೀರಿಗೆ ತೊಂದರೆ ಅನುಭವಿಸಬೇಕಾಗುತ್ತದೆ. ಕಳೆದ ಕೆಲವು ತಿಂಗಳ ಹಿಂದೆಯೇ ಕಾಮಗಾರಿ ಪೂರ್ಣಗೊಂಡಿದ್ದರೂ, ಸಣ್ಣಪುಟ್ಟ ಕಾರಣ ಹೇಳಿ ವಿದ್ಯುತ್ ಸಂಪರ್ಕ ಒದಗಿಸಿಲ್ಲ ಎಂದು ಆಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳಿಗೆ ತಾಕೀತು: ಸಭೆಯಲ್ಲಿ ಸೂಕ್ತ ಮಾಹಿತಿ ನೀಡದೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದ ಸೆಸ್ಕ್ ಅಧಿಕಾರಿಗಳಿಗೆ ತಲೆ ಕೆಟ್ಟಿದೆಯೇ ಎಂದು ಪ್ರಶ್ನೆ ಮಾಡಿದ ಜಿ. ಕುಮಾರ್ ನಾಯಕ್ ಅವರು, ವಿದ್ಯುತ್ ಸಂಪರ್ಕ ನೀಡಿದ ಕಾರಣಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು. ಅಧಿಕಾರಿಗಳ ಕಾರ್ಯವೈಖರಿ ಇದೇ ರೀತಿ ಮುಂದುವರೆದರೆ ಸೇವೆಯಿಂದ ಅಮಾನತು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಉದ್ಯೋಗ ಖಾತ್ರಿ ಯೋಜನೆ ಪ್ರಗತಿ ಮಾಹಿತಿ ಪಡೆದ ಕುಮಾರ್ ನಾಯಕ್, ಯಾವುದೇ ತಾಲೂಕಿನಲ್ಲಿ ಯೋಜನೆ ಪ್ರಗತಿ ತೃಪ್ತಿದಾಯಕವಾಗಿಲ್ಲ. ಯಾವ ಕಾರಣಕ್ಕೆ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಖಾತ್ರಿ ಕುಂಠಿತವಾಗಲು ಕಾರಣ ಏನು?: ಇದಕ್ಕೆ ಸಮರ್ಥಿಸಿಕೊಳ್ಳಲು ಮುಂದಾದ ಜಿಪಂ ಉಪ ಕಾರ್ಯದರ್ಶಿ(ಅಭಿವೃದ್ಧಿ) ಕರಿಯಪ್ಪ ಅವರನ್ನು ಉಸ್ತುವಾರಿ ಕಾರ್ಯದರ್ಶಿ ತರಾಟೆಗೆ ತೆಗೆದುಕೊಂಡರು. ನಿಮ್ಮ ಉಪನ್ಯಾಸ ಕೇಳಲು ನಾನಿಲ್ಲಿಗೆ ಬಂದಿಲ್ಲ, ಯಾವ ಕಾರಣಕ್ಕೆ ಉದ್ಯೋಗ ಖಾತ್ರಿ ಯೋಜನೆ ಸಾಧನೆ ಕುಂಠಿತವಾಗಲು ಕಾರಣ ಏನು ಎಂದು ಪ್ರಶ್ನಿಸಿದರು.
ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಮಾತನಾಡಿ, ಕೆಲಸ ಆಗಿರುವ ಬಗ್ಗೆ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಗತಿಯಾಗಿರುವ ಫೋಟೋಗಳನ್ನು ಮಾಹಿತಿಗಾಗಿ ಸಭೆಗೆ ತರುವಂತೆ ಎಂಜಿನಿಯರ್ಗಳಿಗೆ ಕಳೆದ ಸಭೆಯಲ್ಲಿಯೇ ಸೂಚಿಸಲಾಗಿತ್ತು. ಪುನಃ ಪೋಟೋಗಳನ್ನು ತರದೆ ಸಭೆಗೆ ಹಾಜರಾಗಿದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಗುಡುಗಿದ ಅವರು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ವಿಫಲಗೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮೀನಮೇಷ ಎಣಿಸುವುದಿಲ್ಲ ಎಂದು ಎಚ್ಚರಿಸಿದರು.
ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಾರಣ ಬುಧವಾರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುವುದು. ಸೂಕ್ತ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.
ಕ್ರಿಯಾ ಯೋಜನೆ ತಯಾರಿಸಿ: ಜಂಟಿ ಕೃಷಿ ನಿರ್ದೇಶಕರಿಂದ ಮಳೆ ಮಾಹಿತಿ ಹಾಗೂ ಭೂ ವಿಜ್ಞಾನ ಮತ್ತು ಗಣಿ ಇಲಾಖೆ ಅಧಿಕಾರಿಗಳಿಂದ ಅಂತರ್ಜಲ ಮಟ್ಟ ಕುರಿತಂತೆ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಯವರು, ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಿಯಾ ಯೋಜನೆ ತಯಾರಿಸಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಬಳಸಿಕೊಂಡು ತಾಲೂಕು ಪಂಚಾಯ್ತಿ ಕಾರ್ಯದರ್ಶಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಈ ಯೋಜನೆಯ ಪ್ರಯೋಜನ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.
ಜಿಲ್ಲೆಯಲ್ಲಿ ಹನ್ನೊಂದು ವಾರಗಳಿಗೆ ಬೇಕಾಗುವ ಮೇವು ಇದ್ದು, ಮಳೆಯಾಗುತ್ತಿರುವುದರಿಂದ ಮೇವಿಗೆ ಯಾವುದೇ ತೊಂದರೆಯಾಗುವುದಿಲ್ಲವೆಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ ಅವರು, ಕೃಷಿ ಚಟುವಟಿಕೆ ಪ್ರಾರಂಭವಾಗಿದೆ ಎಂದರು.
ಜಿಪಂ ಸಿಇಒ ಉಪೇಂದ್ರ ಪ್ರತಾಪ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಹಾಗೂ ನಾನಾ ಇಲಾಖೆ ಅಧಿಕಾರಿಗಳು ಇದ್ದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕಾಮಗಾರಿಗಳ ಸಮಗ್ರ ಮಾಹಿತಿ ನೀಡದ ಮೂವರು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಅವರಿಗೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಸೂಚಿಸಿದರು.
ಜಿಪಂ ಚನ್ನರಾಯಪಟ್ಟಣ ಉಪ ವಿಭಾಗದ ಕಾರ್ಯಪಾಲಕ ಅಭಿಯಂತರ ನಾಗರಾಜ್, ಎಇಇ ಸತೀಶ್ ಬಾಬು ಹಾಗೂ ವಿಜಯಕುಮಾರ್ಗೆ ಶೋಕಾಸ್ ನೋಟಿಸ್ ನೀಡುವಂತೆ ಸಭೆಯಲ್ಲಿ ಅಧಿಕಾರಿಗೆ ಸೂಚನೆ ನೀಡಿದ ಅವರು, ಹಿಂದಿನ ಸಭೆಯಲ್ಲಿ ತಾವು ನೀಡಿದ ಸೂಚನೆ ಈ ಅಧಿಕಾರಿಗಳು ಪಾಲಿಸಿಲ್ಲ. ಕುಡಿಯುವ ನೀರಿನ ಕೊಳವೆಬಾವಿ ಕೊರೆಯುವ ಸಂದರ್ಭದ ಫೋಟೋ ಸಮೇತ ಕಾಮಗಾರಿಯ ವಿವರ ನೀಡುವಂತೆ ತಿಳಿಸಿದ್ದರೂ ಕಾಮಗಾರಿಯ ಯಾವುದೇ ದಾಖಲಾತಿ ತಂದಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.