ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮಹಿಳಾ ಮೀಸಲಾತಿ: ಯುಪಿಎ ತಾತ್ಸಾರ

Lingaraj Badiger
Updated On : 19 Apr 2013, 12:26 pm

 ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 18
ಮಹಿಳಾ ಮೀಸಲಾತಿ ಮಸೂದೆಯನ್ನು ತಿರಸ್ಕರಿಸಿ ಹೆಣ್ಣಿಗೆ ಹೆಣ್ಣೇ ಶತ್ರು ಎನ್ನುವಂತೆ ವರ್ತಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮಹಿಳೆಯರ ಮತ ಕೇಳಲು ನೈತಿಕ ಹಕ್ಕಿಲ್ಲ ಎಂದು ಕೆಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯೆ ಅನಿತಾ ಸುಬ್ರಹ್ಮಣ್ಯ ಹೇಳಿದರು.
ಗುರುವಾರ ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ಚುನಾವಣಾ ಪ್ರಚಾರಾರ್ಥ ಪಟ್ಟಣಕ್ಕೆ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಲೋಕಸಭೆಯಲ್ಲಿ ಎರಡು ಬಾರಿ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ಸಿಕ್ಕಿಲ್ಲ. ಈ ಕುರಿತು ತಾತ್ಸಾರ ಮನೋಭಾವನೆ ತಾಳಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಹಿಳೆಯರಿಗೆ ಅವಕಾಶ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದರು.
ಸಾಮಾಜಿಕ ನ್ಯಾಯದಡಿ ಪ್ರತಿ ಲೋಕಸಭಾ ಕ್ಷೇತ್ರಕ್ಕೊಬ್ಬ ಮಹಿಳೆಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವ ವಾಗ್ದಾನವನ್ನು ಸೋನಿಯಾ ಏಕೆ ಪಾಲಿಸಲಿಲ್ಲ? ಎಂದು ಪ್ರಶ್ನಿಸಿದ ಅವರು ಪಕ್ಷದ ಶ್ರೇಯಸ್ಸಿಗೆ ಹೋರಾಟ ಮಾಡಿದ್ದ ಮಹಿಳೆಯರಿಗೆ ಕಾಂಗ್ರೆಸ್ ಟಕೆಟ್ ನೀಡಲಿಲ್ಲ. ಇದನ್ನು ವಿರೋಧಿಸಿ ಮಹಿಳಾ ಮುಖಂಡರು ಸೋನಿಯಾ ನಿವಾಸದೆದುರು ಧರಣಿ ನಡೆಸಿದ್ದಾರೆ ಎಂದರು. ರಾಜಧಾನಿ ದೆಹಲಿಯಲ್ಲೇ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ನಡೆದರೂ ಏನೂ ಆಗಿಲ್ಲವೆಂಬಂತೆ ವರ್ತಿಸಿದ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಹಿಳೆಯರ ರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದು, ಕಾನೂನಿಗೆ ಸೂಕ್ತ ತಿದ್ದುಪಡಿ ತರುವ ಮೂಲಕ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದನ್ನು ಮಹಿಳೆಯರು ಮರೆಯಲು ಸಾಧ್ಯವಿಲ್ಲ ಎಂದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಡ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೊಳಿಸಿದರು. ಬಡತನದಿಂದ ಭ್ರೂಣಹತ್ಯೆಯಂತಹ ಕೃತ್ಯಕ್ಕೆ ಮುಂದಾಗುತ್ತಿದ್ದ ಕುಟುಂಬದ ಶ್ರೇಯಸ್ಸಿಗೆ ಶ್ರಮಿಸಿದರು. ಇಂಧನ ಹಾಗೂ ವಿದ್ಯುತ್ ಖಾತೆ ನಿಭಾಯಿಸಲಾಗದೆ, ಸಚಿವ ಸ್ಥಾನ ಬಿಟ್ಟು ಪಲಾಯನಗೈದ ಈಶ್ವರಪ್ಪ ಅವರ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿದ ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ನೋಡಿಕೊಂಡರು ಎಂದು ಅನಿತಾ ಹೇಳಿದರು. ಅಭಿವೃದ್ಧಿ ಪರ ಚಿಂತನೆ ನಡೆಸುತ್ತಿರುವ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕೆಜೆಪಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿ, ಅಧಿಕಾರಕ್ಕೆ ಬರಲಿದೆ. ಮಹಿಳೆಯನ್ನು ಆರ್ಥಿಕವಾಗಿ ಸದೃಢಗೊಳ್ಳಲು ಯೋಜನೆ ರೂಪಿಸಲಾಗುತ್ತದೆ. ಹೀಗಾಗಿ ಈ ಬಾರಿ ಮಹಿಳಾ ಮತದಾರರು ಕೆಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದರು. ಹೇಮಲತಾ ಸಜ್ಜನರ, ಪುರಸಭೆ ಸದಸ್ಯರಾದ ಸುಧಾ ಕಳ್ಳಿಹಾಳ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement