ಹಣ ಬಿಡುಗಡೆಗೆ ವಿನಂತಿಸುವೆ
ಹಾವೇರಿ: ಜಿಲ್ಲಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆಹಾನಿ ಹಾಗೂ ರಸ್ತೆ ದುರಸ್ತಿ ಕಾರ್ಯಕ್ಕೆ ಬೇಕಾಗಿರುವ ಅವಶ್ಯಕ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಕಂದಾಯ ಸಚಿವರಿಗೆ ವಿನಂತಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ತಿಳಿಸಿದರು.
ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸರ್ಕಾರದ ನೂರು ದಿನ ನೂರಾರು ನಿರ್ಣಯ ಎಂಬ ಕಿರು ಹೊತ್ತಿಗೆ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಸಕ್ತ ವರ್ಷ ಮುಂಗಾರು ಅವಧಿಯಲ್ಲಿ ಸುರಿದ ಮಳೆಯಿಂದಾಗಿ ಆಗಿರುವ ಬೆಳೆಹಾನಿ ಹಾಗೂ ರಸ್ತೆಗಳ ದುರಸ್ತಿಗಾಗಿ ಸರ್ಕಾರ ಈಗಾಗಲೇ ರು. 1 ಕೋಟಿ ಬಿಡುಗಡೆ ಮಾಡಿದೆ ಎಂದರು.
ಮರು ಟೆಂಡರ್: ಹಾವೇರಿ ನಗರದ ಬಸ್ ನಿಲ್ದಾಣ ಕಾಮಗಾರಿಗೆ ಮರು ಟೆಂಡರ್ ಕರೆಯಲಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ. ಹಾವೇರಿಯಲ್ಲಿ ವೈದ್ಯಕೀಯ ಕಾಲೇಜ್ ಸ್ಥಾಪಿಸುವುದಕ್ಕೆ ಸಂಬಂಧಿಸಿದಂತೆ ದೆಹಲಿಯ ಮೆಡಿಕಲ್ ಕೌನ್ಸೆಲ್ಗೆ ಮತ್ತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರದ ಮುಂದಿನ ಆಡಳಿತ ಹಾಗೂ ಹಿಂದಿನ ನೂರು ದಿನಗಳ ಆಡಳಿತದ ಬಗ್ಗೆ ಜನತೆಗೆ, ಮತದಾರರಿಗೆ ತಿಳಿಸುವ ಉದ್ದೇಶದಿಂದ ಈ ಪುಸ್ತಕ ಹೊರತರಲಾಗಿದೆ. ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರ ಅವಧಿಯಲ್ಲಿ ಜನರಿಗೆ ಮೂಲ ಅವಶ್ಯಕತೆ, ಬೇಡಿಕೆಗಳನ್ನು ಈಡೇರಿಸಲು ಎಲ್ಲ ರೀತಿ ಪ್ರಯತ್ನ ಮಾಡಲಿದೆ ಎಂದೂ ಸಚಿವ ಹುಕ್ಕೇರಿ ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ರುದ್ರಪ್ಪ ಲಮಾಣಿ, ಜಿಪಂ ಸಿಇಒ ಉಮೇಶ ಕುಸುಗಲ್ಲ, ಜಿಪಂ ಉಪಕಾರ್ಯದರ್ಶಿ ಮಹಾಂತೇಶ ಬೀಳಗಿ, ಜಿಲ್ಲಾ ವಾರ್ತಾಧಿಕಾರಿ ಎಂ. ಜುಂಜಣ್ಣ ಮತ್ತಿತರರು ಇದ್ದರು.