ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸುದ್ದಿ ಸಂಕ್ಷೇಪ

Mainashree
Updated On : 19 Dec 2013, 10:59 am

ಬ್ಯಾಂಕ್ ನೌಕರರ ಮುಷ್ಕರ: ಪರದಾಡಿದ ಗ್ರಾಹಕ
ರಾಣಿಬೆನ್ನೂರು: ಬ್ಯಾಂಕ್ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ತಮ್ಮ ಸಂಘದ ಕರೆಯ ಮೇರೆಗೆ ಬುಧವಾರ ಬ್ಯಾಂಕ್ ಕೆಲಸ ಕಾರ್ಯಗಳಿಗೆ ಹಾಜರಾಗದಿರುವುದರಿಂದ ಹಣ ಪಡೆಯಲು ಗ್ರಾಹಕರು ತೊಂದರೆ ಅನುಭವಿಸಿದರು. ವೇತನ ಹೆಚ್ಚಳಕ್ಕಾಗಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದರಿಂದ ನಗರದ ಪೋಸ್ಟ್ ಸರ್ಕಲ್‌ನಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್, ಕೆನರಾ ಬ್ಯಾಂಕ್, ಸಂಗಮ್ ಸರ್ಕಲ್‌ನಲ್ಲಿರುವ ವಿಜಯ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಬಸ್ ನಿಲ್ದಾಣದ ಸಮೀಪದಲ್ಲಿರುವ ಸಿಂಡಿಕೇಟ್ ಬ್ಯಾಂಕ್, ಎಡಿಬಿ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಮತ್ತು ಮೈಸೂರು ಬ್ಯಾಂಕ್‌ಗೆ ಬಂದಿದ್ದ ಸಾವಿರಾರು ಗ್ರಾಹಕರು ಪರಡಾಡುವಂತಾಯಿತು.
ಇಂದು ಅಂಗವಿಕಲರ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ
ಹಾವೇರಿ: ವಿವಿಧ ಸಂಘಟನೆಗಳ ಆಶ್ರಯದಲ್ಲಿ ಡಿ. 19ರಂದು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಡಿ. 20ರಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ನಗರದ ಹೊಸಮಠದ ಪ್ರೌಢಶಾಲೆಯಲ್ಲಿ ಜರುಗಲಿದೆ. ಡಿ. 19ರಂದು ಬೆಳಗ್ಗೆ 10 ಗಂಟೆಗೆ ಜರುಗುವ ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಹಾವೇರಿ ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಪುಟ್ಟಪ್ಪ ಜಲದಿ ನೆರವೇರಿಸಲಿದ್ದು, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ ಧ್ವಜಾರೋಹಣ ನೆರವೇರಿಸುವರು. ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಅಧ್ಯಕ್ಷತೆ ವಹಿಸಲಿದ್ದಾರೆ. 20ರಂದು ಬೆಳಗ್ಗೆ 11-30ಕ್ಕೆ ಜರುಗುವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ನೆರವೇರಿಸಲಿದ್ದು, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ರುದ್ರಪ್ಪ ಲಮಾಣಿ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಕೂಡ್ಲಿಗಿ ತಾಲೂಕಿನ ಉಜ್ಜಿನಿಯ ಕಾರ್ತಿಕೋತ್ಸವದಲ್ಲಿ ಜರುಗಿದ ಸಾಮೂಹಿಕ ವಿವಾಹ, ಧರ್ಮ ಸಭೆಯಲ್ಲಿ ಹಿರೇಕೆರೂರು ಶಾಸಕ ಯು. ಬಿ. ಬಣಕಾರ ಮಾತನಾಡಿದು.
ಇಂದು ವಿಶ್ವ ಏಡ್ಸ್ ದಿನಾಚರಣೆ
ಹಾವೇರಿ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ, ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ ಹಾಗೂ ಸರ್ಕಾರಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳ ಆಶ್ರಯದೊಂದಿಗೆ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಡಿ. 19ರಂದು ಬೆಳಗ್ಗೆ 10-30ಕ್ಕೆ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಲಿದೆ.
ಇದಕ್ಕೂ ಮೊದಲು ಬೆಳಗ್ಗೆ 9-30ಕ್ಕೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಿಂದ ಜಾಥಾ ಹೊರಡಲಿದೆ. ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಜಾಥಾಕ್ಕೆ ಚಾಲನೆ ನೀಡಲಿದ್ದು, ತಾಲೂಕು ಆರೋಗ್ಯಾಧಿಕಾರಿ ಕಾರ್ಯಾಲಯದವರೆಗೆ ಜಾಥಾ ಜರುಗಲಿದೆ. ಸಣ್ಣ ಕೈಗಾರಿಕೆ, ಮುಜರಾಯಿ, ಸಕ್ಕರೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು.
ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಚ್. ರಾಘವೇಂದ್ರಸ್ವಾಮಿ ತಿಳಿಸಿದ್ದಾರೆ.
ನಾಳೆ ವಿದ್ಯುತ್ ವ್ಯತ್ಯಯ
ರಾಣಿಬೆನ್ನೂರು: ನಗರದ ಹಲಗೇರಿ ರಸ್ತೆಯಲ್ಲಿರುವ 220 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ರಿಪೇರಿ ಹಾಗೂ ತ್ರೈಮಾಸಿಕ ನಿರ್ವಹಣಾ ಕೆಲಸವಿರುವ ಕಾರಣ ಡಿ. 20ರಂದು ನಗರ ಮತ್ತು ತಾಲೂಕಿನ ಪ್ರದೇಶದ ಎಲ್ಲ ಹಳ್ಳಿಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿದುತ್ ವಿತರಣೆಯನ್ನು ಸ್ಧಗಿತಗೊಳಿಸಲು ತೀರ್ಮಾನಿಸಲಾಗಿದೆ. ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ನೀಡಲು ಕಲಾವಿದರು, ಕಲಾ ತಂಡಗಳಿಗೆ ಸೂಚನೆ
ಹಾವೇರಿ: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಬುಡಕಟ್ಟು ಜನರ ಹಬ್ಬ, ಜನವರಿ ಎರಡನೇ ಅಥವಾ ಮೂರನೇ ವಾರದಲ್ಲಿ ಮೈಸೂರಿನಲ್ಲಿ ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಜಿಲ್ಲೆಯ ಪರಿಶಿಷ್ಟ ಪಂಗಡಗಳ ಕಲಾ ತಂಡಗಳು ತಮ್ಮ ಕಲಾ ತಂಡಗಳ ಹೆಸರು, ಕಲೆಯ ಹೆಸರು, ಕಲಾ ತಂಡದವರ ಸಂಖ್ಯೆ ಹಾಗೂ ಸ್ಥಳೀಯ ಪ್ರದೇಶದಿಂದ ಮೈಸೂರು ನಗರಕ್ಕೆ ಪ್ರಯಾಣದ ವೆಚ್ಚ ಇತ್ಯಾದಿ ವಿವರಗಳ ಮಾಹಿತಿಯನ್ನು ಡಿ. 23ರೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement