ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹೋಬಳಿಗೊಂದು ವಸತಿ ಶಾಲೆ

Mainashree
Updated On : 23 Dec 2013, 10:44 am

ಕನ್ನಡಪ್ರಭ ವಾರ್ತೆ, ಹಾವೇರಿ, ಡಿ. 22
ರಾಜ್ಯದ ಎಲ್ಲ ಹೋಬಳಿಗೆ ಒಂದರಂತೆ ಅಂತಾರಾಷ್ಟ್ರೀಯ ಗುಣಮಟ್ಟದ ವಸತಿ ಶಾಲೆ ಇರುವಂತೆ ನೋಡಿಕೊಳ್ಳಲಾಗುತ್ತಿದೆ. ಅಗತ್ಯವಿರುವಲ್ಲಿ ವಸತಿ ಶಾಲೆ ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಎಚ್. ಆಂಜನೇಯ ತಿಳಿಸಿದರು.
ಹಾನಗಲ್ಲ ತಾಲೂಕಿನ ಸೋಮಸಾಗರ ಗ್ರಾಮದಲ್ಲಿ ಬಿಸಿಎಂ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು. ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಅಟಲ್‌ಜಿ ವಸತಿ ಶಾಲೆ ಸೇರಿದಂತೆ ಪ್ರತಿ ಹೋಬಳಿಗೂ ಒಂದು ವಸತಿ ಶಾಲೆ ಇರಬೇಕು. ಯಾವ ಹೋಬಳಿಯಲ್ಲಿ ವಸತಿ ಶಾಲೆ ಇಲ್ಲವೋ ಅಲ್ಲಿ ಹೊಸ ಶಾಲೆ ಆರಂಭಿಸಲಾಗುವುದು. ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ನಗರ ಪ್ರದೇಶದ ಮಕ್ಕಳಿಗಿಂತ ಯಾವುದರಲ್ಲೂ ಕಡಿಮೆ ಇಲ್ಲದಂತೆ ಅಲ್ಲಿ ಕನ್ನಡ ಹಾಗೂ ಆಂಗ್ಲ ಮಾಧ್ಯಮಗಳಲ್ಲಿ ಶಿಕ್ಷಣ ನೀಡಲಾಗುವುದು. ಈ ನಿಟ್ಟಿನಲ್ಲಿ ಕ್ರಾಂತಿಕಾರಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
100 ಮೆಟ್ರಿಕ್ ಪೂರ್ವ ವಸತಿ ಶಾಲೆ
ಹಾಸ್ಟೆಲ್ ವಂಚಿತ ವಿದ್ಯಾರ್ಥಿಗಳಿಗಾಗಿ ವಿದ್ಯಾಸಿರಿ ಯೋಜನೆ ಘೋಷಿಸಲಾಗಿದೆ. ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೂ ಈ ಯೋಜನೆ ವಿಸ್ತರಿಸಲಾಗಿದೆ. ಶಿಕ್ಷಣದಿಂದಲೇ ಸಮಾಜದ ಸುಧಾರಣೆ ಸಾಧ್ಯ. ಅದಕ್ಕಾಗಿ ಕ್ರಾಂತಿಕಾರಿ ಬದಲಾವಣೆ ತರಲಾಗುತ್ತಿದೆ. ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಎಷ್ಟು ಖರ್ಚಾದರೂ ಅದನ್ನು ಭರಿಸಲು ಸರ್ಕಾರ ಸಿದ್ಧವಿದೆ. ಹಿಂದುಳಿದ ಸಮಾಜಗಳಿಗೆ ಶಿಕ್ಷಣ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಅಗತ್ಯ ನೆರವು ನೀಡಲಾಗುವುದು. ಈ ವರ್ಷ ಹೊಸದಾಗಿ 100 ಮೆಟ್ರಿಕ್ ಪೂರ್ವ ವಸತಿ ನಿಲಯ ಆರಂಭಿಸಲಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇತ ನರ್ಸಿಂಗ್ ಹಾಸ್ಟೆಲ್, ವೃತ್ತಿ ಶಿಕ್ಷಣ ಕೋರ್ಸ್, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಆರಂಭಿಸಲಾಗುವುದು ಎಂದು ಹೇಳಿದರು.
ಅನುದಾನ ಕೊಡಿ
ಶಾಸಕ ಮನೋಹರ ತಹಶೀಲ್ದಾರ ಮಾತನಾಡಿ, ಜಿಲ್ಲೆಯ ಹಾಸ್ಟೆಲ್‌ಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಅದಕ್ಕಾಗಿ ಬಿಸಿಎಂ ಹಾಸ್ಟೆಲ್‌ಗಳಿಗೆ ರು. 3.25 ಕೋಟಿ ಹಾಗೂ ಎಸ್ಸಿಎಸ್ಚಿ ಹಾಸ್ಟೆಲ್‌ಗಳ ಸುಧಾರಣೆಗೆ ರು. 2.50 ಕೋಟಿ ಅನುದಾನ ನೀಡಬೇಕು. ಹಾಸ್ಟೆಲ್‌ಗಳಿಗೆ ಪ್ರವೇಶ ಸಂಖ್ಯೆ ಮಿತಿಯನ್ನು ಹೆಚ್ಚಿಸಬೇಕು. ಸದ್ಯ ಜಿಲ್ಲೆಯ ಹಾಸ್ಟೆಲ್‌ಗಳು ಮೂಲಭೂತ ಸೌಲಭ್ಯಗಳಿಲ್ಲದೆ ಶೋಚನೀಯ ಸ್ಥಿತಿಯಲ್ಲಿವೆ. ಪರಿಸ್ಥಿತಿ ಸುಧಾರಣೆಗೆ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದರು.
ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಮಾತನಾಡಿದರು. ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಣ್ಣಗೌಡ ಪಾಟೀಲ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement