ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಪ್ರೌಢಶಾಲೆ ಮಕ್ಕಳಿಗಿನ್ನು ಚೌಚೌಬಾತ್

Vishwanath S
Updated On : 29 Dec 2013, 12:00 pm

ಕನ್ನಡಪ್ರಭ ವಾರ್ತೆ, ಹಾವೇರಿ, ಡಿ. 28
ಮಕ್ಕಳ ದಾಖಲಾತಿ ಮತ್ತು ಹಾಜರಾತಿ ಹೆಚ್ಚಿಸುವ ಸಲುವಾಗಿ ಅಕ್ಷರ ದಾಸೋಹ ಕಾರ್ಯಕ್ರಮದ ಅಡಿಯಲ್ಲಿ ಇನ್ನು ಮುಂದೆ ಉಪ್ಪಿಟ್ಟು, ಸಿಹಿ ತಿಂಡಿಗಳನ್ನು ವಿತರಿಸಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ಆಂಜನಪ್ಪ ಹೇಳಿದರು.
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ. 3ರಲ್ಲಿ ಚೌಚೌಬಾತ್ ವಿತರಣಾ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಶಾಲೆಯಲ್ಲಿ ಮಕ್ಕಳ ಹಾಜರಾತಿ ಮತ್ತು ದಾಖಲಾತಿ ಹೆಚ್ಚಿಸುವುದರೊಂದಿಗೆ ಮಕ್ಕಳಿಗೆ ಸಮತೋಲನ ಆಹಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳ ದೈಹಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಅಗತ್ಯವಿದೆ. ಇದನ್ನು ಅರಿತ ಸರ್ಕಾರ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಅಕ್ಷರ ದಾಸೋಹ ಯೋಜನೆಯಲ್ಲಿ ಇನ್ನು ಮುಂದೆ ವಾರದಲ್ಲಿ ಒಂದು ದಿನ ಗೋದಿಯಿಂದ ಮಾಡಿದ ಉಪ್ಪಿಟ್ಟು ಮತ್ತು ಸಿಹಿ ತಿಂಡಿಯನ್ನು ನೀಡಲಿದೆ. ಮಕ್ಕಳು ಇದರ ಪ್ರಯೋಜನ ಪಡೆದು ಆರೋಗ್ಯವಂತರಾಗುವ ಮೂಲಕ ಶಾಲೆಗೆ ನಿಯಮಿತವಾಗಿ ಹಾಜರಾಗಿ ಎಂದು ಕರೆ ನೀಡಿದರು.
2.12 ಲಕ್ಷ ಮಕ್ಕಳಿಗೆ...
ಪ್ರಾಸ್ತಾವಿಕವಾಗಿ ಮಾತನಾಡಿದ ಅಕ್ಷರ ದಾಸೋಹ ಅದಿಕಾರಿ ಝಡ್.ಎಂ. ಖಾಜಿ, ಮಕ್ಕಳಿಗೆ ವಿವಿಧ ರೀತಿಯ ಪೌಷ್ಟಿಕ ಆಹಾರ ನೀಡುವುದರ ಮೂಲಕ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಸಹಾಯಕವಾಗಲಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಸಲಹೆ ಮೇರೆಗೆ ಇದನ್ನು ಆರಂಭಿಸಲಾದ್ದು, ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು ಇದರ ಮೂಲ ಉದ್ದೇಶ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸೇರಿದಂತೆ ಜಿಲ್ಲೆಯ 1485 ಶಾಲೆಗಳ 2.12 ಲಕ್ಷ ಮಕ್ಕಳು ಇದರ ಪ್ರಯೋಜನ ಪಡೆಯಲ್ಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಾ ಆಡಿನ್, ಜಿಪಂ ಮುಖ್ಯ ಕಾರ್ಯದರ್ಶಿ ಜಿ. ಗೋವಿಂದಸ್ವಾಮಿ, ಜಿಪಂ ಮುಖ್ಯ ಯೋಜನಾಧಿಕಾರಿ ಬಸವನಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಕೊಡ್ಲಿ, ಶಾಲೆಯ ಮುಖ್ಯಶಿಕ್ಷಕಿ ಸುಶೀಲಾ ಸಿಂಧೆ ಇದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಸ್ವಾಗತಿಸಿದರು. ಅಕ್ಷರ ದಾಸೋಹ ತಾಲೂಕಾಧಿಕಾರಿ ಎಸ್.ಎಸ್. ಅಡಿಗ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement