ಮಹಿಳಾ ಸಬಲೀಕರಣಕ್ಕೆ ಗ್ರಾಮಾಭಿವೃದ್ಧಿ ಶ್ರಮ
ಹಿರೇಕೆರೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವಾರು ವರ್ಷಗಳಿಂದ ಹಳ್ಳಿ, ನಗರ, ರಾಜ್ಯ ಹಾಗೂ ರಾಷ್ಟ್ರ ವ್ಯಾಪ್ತಿ ಶಾಖೆಗಳನ್ನು ಹೊಂದಿ ಅನೇಕ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಎಂದು ಮಾಜಿ ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ಸರ್ವಜ್ಞ ಕಲಾ ಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದ ವಾರ್ಷಿಕೋತ್ಸವ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳೆಯರು ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಸ್ವಾವಲಂಬಿ ಬದುಕು ಸಾಗಿಸಲು ಸಶಕ್ತರನ್ನಾಗಿ ಮಾಡುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ ಎಂದರು.
ಸಂತಸದ ಸಂಗತಿ: ಮಹಿಳೆಯರು ಇಂತಹ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜ್ಞಾನವನ್ನು ವೃದ್ಧಿಸಿಕೊಂಡು ತಮ್ಮಲ್ಲಿರುವ ದೃಢ ಮನಸ್ಸು ಹಾಗೂ ಚಾಕಚಕ್ಯತೆಯಿಂದ ಎಲ್ಲ ರಂಗದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವುದು ಹರ್ಷದಾಯಕ ಎಂದರು. ಇಂಥ ಸಂಘ-ಸಂಸ್ಥೆಗಳ ಮೂಲಕ ನೂತನ ಯೋಜನೆಗಳನ್ನು ಜಾರಿ ಮಾಡಿದರೆ ಗ್ರಾಮೀಣಾಭಿವೃದ್ಧಿ ಜೊತೆಗೆ ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರೆಕಿಸಿಕೊಡಲು ಸಾಧ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ದಿವಾಣಿ ನ್ಯಾಯಾಧೀಶೆ ಶಿರೀನ ಅನ್ಯಾರಿ ಮಾತನಾಡಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಜಾತಿ, ಮತ, ಧರ್ಮವನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸಿ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ತಾಪಂ ಉಪಾಧ್ಯಕ್ಷೆ ರೂಪಾ ಆಡೂರ ಮಾತನಾಡಿ, ಮಹಿಳೆಯರು ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಎದುರಿಸಬೇಕು. ಈ ಸಂಸ್ಥೆ ಹಾಗೂ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ಕರೆ ನೀಡಿದರು.
ಮಹಿಳಾ ಜ್ಞಾನ ವಿಕಾಸ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ವಿಶಾಲಾ ಮಲ್ಲಾಪುರ ಉಪನ್ಯಾಸ ನೀಡಿದರು.
ಈ ಸಂದರ್ಭ ಸಂಸ್ಥೆ ನಿರ್ದೇಶಕ ವಸಂತ ಸಾಲ್ಯಾನ್, ತಹಸೀಲ್ದಾರ್ ತುಷಾರ ಹೊಸೂರ, ಕೃಷ್ಣ ಕುಲಾಲ, ಸಿ.ಎಂ. ಪುಟ್ಟಕ್ಕಳವರ ಇದ್ದರು.
ಸಮನ್ವಯಾಧಿಕಾರಿ ರೇಣುಕಾ ಎಚ್.ವೈ. ವರದಿ ವಾಚಿಸಿದರು. ಚಂದ್ರಕಲಾ ಹರಿಜನ ಸ್ವಾಗತಿಸಿದರು. ಕೆ. ಉಮೇಶ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.