ಬಾಲಕಿ ಅತ್ಯಾಚಾರ: ಪ್ರತಿಭಟನೆ
ಹಾವೇರಿ: ನಗರದ ಮೈಲಾರ ಮಹಾದೇವಪ್ಪ ಸರ್ಕಲ್‌ನ ಸರ್ಕಾರಿ ಪ್ರಾಥಮಿಕ ಶಾಲೆ ನಂ. 2ರಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಜರುಗಿಸುವಂತೆ ಆಗ್ರಹಿಸಿದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ನ ನಗರ ಶಾಖೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಈ ಕುರಿತಂತೆ ಎಬಿವಿಪಿ ಕಾರ್ಯಕರ್ತರು ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ನಗರದ ಪ್ರಮುಖ ಬೀದಿಗಳಲ್ಲಿ ತಪ್ಪಿತಸ್ಥರ ವಿರುದ್ಧ ಮೃದುಧೋರಣೆ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಇಲ್ಲಿನ ಗಾಂಧಿ ವೃತ್ತದಲ್ಲಿ ಘಟನೆ ಖಂಡಿಸಿ ಬೃಹತ್ ರ್ಯಾಲಿ ನಡೆಸಿದ ಬಳಿಕ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕ್ರಮ ಜರುಗಿಸಿ: ಪ್ರತಿಭಟನಾಕಾರರನ್ನು ಉದ್ದೇಶಿಸಿ ಜಿಲ್ಲಾ ಸಂಚಾಲಕ ಸಂತೋಷ ಆಲದಕಟ್ಟಿ ಮಾತನಾಡಿ, ಮಡಿವಂತಿಕೆ ಹಾಗೂ ಶೀಲವಂತಿಕೆಯ ಭಾರತ ಇಂದು ಸ್ತ್ರೀಯರ ವಿಷಯದಲ್ಲಿ ಅಧೋಗತಿಗೆ ತಲುಪಿದೆ. ಅತ್ಯಾಚಾರಿಗಳಿಗೆ ಶಿಕ್ಷೆಯಾದ ಪ್ರಕರಣ ತೀರಾ ವಿರಳ. ಅತ್ಯಾಚಾರಿಗಳು ರಾಜಕೀಯ ಶಕ್ತಿ ಬಳಸಿ ಶಿಕ್ಷೆಯಿಂದ ಪಾರಾಗುತ್ತಿದ್ದಾರೆ. ಇದು ಅತ್ಯಾಚಾರಿಗಳಿಗೆ ಕುಮ್ಮಕ್ಕು ನೀಡಿದಂತಾಗುತ್ತಿದ್ದು, ಕೂಡಲೇ ಸರ್ಕಾರ ಉಗ್ರ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಗಲ್ಲು ವಿಧಿಸಿ: ಹಾವೇರಿ ನಗರದಲ್ಲಿ 2012ರ ಅಕ್ಬೋಬರ್ 30ರಂದು ಸರ್ಕಾರಿ ಶಾಲೆಯ 8 ವರ್ಷದ ವಿದ್ಯಾರ್ಥಿನಿಯ ಮೇಲೆ ನಾಲ್ಕು ಜನ ಯುವಕರು ಅತ್ಯಾಚಾರ ಮಾಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣ ದಿನದಿಂದ ದಿನಕ್ಕೆ ಮೂಲೆಗುಂಪಾಗುತ್ತಿದೆ. ಇಂಥ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲೇಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಸೌಮ್ಯಾ ಬಸೇಗಣ್ಣಿ, ಅಪ್ಪಣ್ಣ ಎಂ. ಮಾತನಾಡಿ, ಹಾವೇರಿಯಲ್ಲಿ ಅತ್ಯಾಚಾರಕ್ಕೊಳಗಾದ ವಿದ್ಯಾರ್ಥಿನಿಯ ಪ್ರಕರಣದಲ್ಲಿ ಆರೋಪಿಗಳಿಗೆ ನೀಡಲಾದ ಜಾಮೀನು ರದ್ದುಗೊಳಿಸಬೇಕು ಹಾಗೂ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಿರಣ, ಬಸವರಾಜ ಟೀಕಿಹಳ್ಳಿ, ಸಂತೋಷ, ರಮೇಶ, ಗಣೇಶ ಕೆ, ಜ್ಯೋತಿ, ನವೀನ, ದಾದಾಪೀರ, ಜಗದೀಶ, ರಮೇಶ. ಬಿ.ಎಚ್, ಶಿಲ್ಪಾ, ಕಾಲೇಜಿನ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.