2ನೇ ಹಂತದ ಏತ ನೀರಾವರಿ ಯೋಜನೆ
ಹಾವೇರಿ: ದೇಶದ ಪ್ರಥಮ ತುಂತುರು ಏತ ನೀರಾವರಿ ಯೋಜನೆಯಾದ ಶಿಗ್ಗಾಂವಿ ಏತ ನೀರಾವರಿ ಯೋಜನೆಯ 2ನೇ ಹಂತಕ್ಕೆ ಜನವರಿ ಅಂತ್ಯದೊಳಗೆ ಅನುಮೋದನೆ ದೊರೆಯಲಿದೆ ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಲ್ಲಿನ ಹುಕ್ಕೇರಿಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ತಿಂಗಳಾಂತ್ಯಕ್ಕೆ ಸರ್ಕಾರದಿಂದ ಅನುಮೋದನೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎರಡನೇ ಹಂತದ ಅನುಷ್ಠಾನಕ್ಕೆ ರು. 260 ಕೋಟಿ ವೆಚ್ಚ ತಗುಲುವುದು ಎಂದು ಅಂದಾಜಿಸಲಾಗಿದೆ. ಇದರಿಂದ 35 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯವಾಗುತ್ತದೆ.
ಕೆರೆಗೆ ನೀರು ಯೋಜನೆ ಸಿದ್ಧ: ಸವಣೂರು ತಾಲೂಕಿನ ಹತ್ತಿಮತ್ತೂರು, ಶಿರಬಡಗಿ, ಮಾದಾಪುರ, ಶಿಗ್ಲಿ ಸೇರಿದಂತೆ ವಿವಿಧ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದರಡಿಯಲ್ಲಿದೆ. ಎರಡನೇ ಹಂತದಲ್ಲಿ ಮುಖ್ಯವಾಗಿ ಕೆರೆಗಳಿಗೆ ನೀರು ತುಂಬಿಸುವುದನ್ನೇ ಮುಖ್ಯ ಉದ್ದೇಶವಾಗಿರಿಸಿಕೊಂಡು ಯೋಜನೆ ಸಿದ್ಧಪಡಿಸಲಾಗಿದೆ ಎಂದರು.
ಶೀಘ್ರ ಅಡಿಗಲ್ಲು: ಜಿಲ್ಲೆಗೆ ಮಂಜೂರಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಈ ಸಲದ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡುವ ವಿಶ್ವಾಸವಿದೆ. ಜ. 23ರಂದು ಕೊಪ್ಪಳ ಏತ ನೀರಾವರಿ ಯೋಜನೆಗೂ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಡಿಗಲ್ಲು ನೆರವೇರಿಸಲಿದ್ದಾರೆ. ತುಂಗಭದ್ರಾ ನದಿಯಿಂದ ಸುಮಾರು 11.5 ಟಿಎಂಸಿ ನೀರನ್ನು ಬಳಕೆ ಮಾಡಲಾಗುತ್ತದೆ. ಇದು ತುಂತುರು ಏತ ನೀರಾವರಿ ಯೋಜನೆಯಾಗಿದೆ. ಯೋಜನೆಯಿಂದ ಸುಮಾರು 2.17 ಲಕ್ಷ ಎಕರೆ ನೀರಾವರಿಗೊಳಪಡುತ್ತದೆ. ಇದರ ಅಂದಾಜು ವೆಚ್ಚ ಸುಮಾರು ರು. 1 ಸಾವಿರ ಕೋಟಿ ಎಂದರು. ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಪ್ರಸಕ್ತ ಬಜೆಟ್‌ನಲ್ಲಿ ಜಿಲ್ಲೆಯ ಜಾನಪದ ವಿವಿಗೂ ಅಗತ್ಯಕ್ಕೆ ತಕ್ಕಂತೆ ಅನುದಾನ ನೀಡಲಾಗುವುದು ಎಂದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಂದ್ರ ಕಟಕೋಳ ಇದ್ದರು.