ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಕರ್ನಾಟಕ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಹಾನಗರ ಪಾಲಿಕೆ ಎದುರು ಸಾಂಕೇತಿಕ ಧರಣಿ ಆರಂಭಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು. ಗುತ್ತಿಗೆ ಪೌರ ಕಾರ್ಮಿಕರಿಗೆ ಸಮರ್ಪಕವಾಗಿ ವೇತನ ಬಟವಡೆ, ಆಸ್ಪತ್ರೆ ವೆಚ್ಚವನ್ನು ಮಹಾನಗರ ಪಾಲಿಕೆ ವತಿಯಿಂದ ಭರಿಸಬೇಕು. ಗುತ್ತಿಗೆ ಪೌರ ಕಾರ್ಮಿಕರ ಹಿತ ರಕ್ಷಣೆ ಮತ್ತು ಪರಿಹಾರ ವಿತರಣೆಗೆ ಸಂಬಂಧಿಸಿದ ವಿಚಾರಗಳನ್ನು ಸಮಿತಿ ಎದುರು ತಂದು ಪರಿಹರಿಸಬೇಕು. ಕಾರ್ಮಿಕರ ಉದ್ಯೋಗ ಭದ್ರತೆಗೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಆಯುಕ್ತರು ಸೂಕ್ತ ಕ್ರಮ ತೆಗೆದುಕೊಂಡು ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಈಗಾಗಲೇ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಬೆಳೆದಿರುವ ಕಾರಣ ಮಹಾನಗರ ಪಾಲಿಕೆ ಕನಿಷ್ಠ 3 ಸಾವಿರ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಐದು ದಿನಗಳ ಧರಣಿಯನ್ನು ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಮ್ಮಿಕೊಂಡಿದೆ.