ಮಕ್ಕಳ ಪ್ರಶಸ್ತಿ: ವ್ಯಕ್ತಿ, ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಕನ್ನಡಪ್ರಭ ವಾರ್ತೆ, ಹಾವೇರಿ, ಜ. 22
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಅಸಾಧಾರಣ ಸೇವೆ ಸಲ್ಲಿಸಿದ ಮೂವರು ವ್ಯಕ್ತಿಗಳಿಗೆ ಹಾಗೂ ಐದು ಸಂಸ್ಥೆಗಳ ಸೇವೆ ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಕ್ಕಳ ವರ್ಷವಾದ 1979ರಿಂದ ಜಾರಿಗೆ ತಂದಿದೆ.
ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರು. 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿ ರು. 3 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.
ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಪ್ರಶಸ್ತಿಗೆ ಆಯ್ಕೆ ಮಾಡಲು ಇರುವ ಒಂದೇ ಮಾನದಂಡ-ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ಪ್ರಶಸ್ತಿಯನ್ನು ಪ್ರತಿ ವರ್ಷ ವಿಶ್ವ ಮಕ್ಕಳ ದಿನಾಚರಣೆ ದಿನ ನ. 14ರಂದು ಘೋಷಿಸಿ, ನವದೆಹಲಿಯಲ್ಲಿ ಪ್ರದಾನ ಮಾಡಲಾಗುವುದು. ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ ಸಮಿತಿಯು ಈ ಪ್ರಶಸ್ತಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಚೆನ್ನಮ್ಮ ಹೊಳಿಹೊಸೂರು ತಿಳಿಸಿದ್ದಾರೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 2012-13ನೇ ಸಾಲಿನಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳು ರಾಷ್ಟ್ರ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲಾ ಉಪನಿರ್ದೇಶಕು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿಯಿಂದ ಪಡೆದು, ಆಂಗ್ಲ ಭಾಷೆಯಲ್ಲೇ ಭರ್ತಿ ಮಾಡಿ, ಫೆ. 28ರೊಳಗಾಗಿ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರಿಗೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.