ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ
ಹಾವೇರಿ: ಮಹಿಳೆಯರು ಮನೆಗಷ್ಟೇ ಸೀಮಿತವಾಗಿರದೆ ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡು, ಇಂಥ ವಸ್ತು ಪ್ರದರ್ಶನ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಇರಿಸಬೇಕೆಂದು ಹುಕ್ಕೇರಿಮಠದ ಸದಾಶಿವ ಶ್ರೀಗಳು ನುಡಿದರು.
ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಹುಕ್ಕೇರಿಮಠದ ಆವರಣದಲ್ಲಿ ಆಯೋಜಿದ್ದ ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಮಹಿಳಾ ಉದ್ಯಮಿಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ವಸ್ತುಗಳನ್ನು ಖರೀದಿಸಿ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಬೇಕು. ಮಹಿಳಾ ಸಬಲೀಕರಣದತ್ತ ಇಲಾಖೆ ಇಂಥ ಒಳ್ಳೆಯ ಕಾರ್ಯಕ್ರಮ ನಡೆಸುತ್ತಿರುವುದು ಸ್ವಾಗತಾರ್ಹ ಎಂದರು.
ಅಧ್ಯಕ್ಷತೆ ವಹಿಸಿದ್ದ ಉಪವಿಭಾಗಾಧಿಕಾರಿ ಚನ್ನಬಸಪ್ಪ ಮಾತನಾಡಿ, ಮಹಿಳೆಯರು ಈ ಹಿಂದೆ ಆರ್ಥಿಕವಾಗಿ ಸಬಲರಾಗಿರಲಿಲ್ಲ. ಇಂದು ಸ್ವಾವಲಂಬಿಗಳಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ನೀಲಮ್ಮ ಉಪಸ್ಥಿತರಿದ್ದರು. ಮೇಳದಲ್ಲಿ 60ಕ್ಕೂ ಹೆಚ್ಚು ಸ್ತ್ರೀಶಕ್ತಿ ಸಂಘಗಳು ಭಾಗವಹಿಸಿದ್ದವು. ಸುರೇಖಾ ಹಿರೇಮಠ ಪ್ರಾರ್ಥಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕಿ ಸಿ.ಎನ್. ಹೊಳಿಹೊಸೂರ ಸ್ವಾಗತಿಸಿದರು. ಅಧೀಕ್ಷಕಿ ಎ.ಐ. ಮಡಿವಾಳರ ನಿರ್ವಹಿಸಿ, ವಂದಿಸಿದರು.