ಎನ್‌ಆರ್‌ಇಜಿ ತಂಡದಿಂದ ಪರಿಶೀಲನೆ
ಬ್ಯಾಡಗಿ: ಉದ್ಯೋಗ ಖಾತ್ರಿ ಹಣಕ್ಕಾಗಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಬೀಗ ಜಡಿದು ರೈತರು ಮಂಗಳವಾರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎನ್‌ಆರ್‌ಇಜಿ ಯೋಜನೆಯ ಸಹಾಯಕ ನಿರ್ದೇಶಕ ಎನ್. ಅಮರಪ್ಪ ನೇತೃತ್ವದ ತಂಡ ಬುಧವಾರ ಚಿಕ್ಕಬಾಸೂರು ಗ್ರಾಪಂ ಕಾರ್ಯಾಲಯಕ್ಕೆ ಭೇಟಿ ಪರಿಶೀಲನೆ ನಡೆಸಿತು.
ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿಗೆ ಹಣ ವಿತರಿಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮತ್ತು ಜಲಾನಯನ ಇಲಾಖಾಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಆಗ್ರಹಿಸಿ ರೈತ ಸಂಘದ ತಾಲೂಕು ಘಟಕದ ಕಾರ್ಯಕರ್ತರು ಚಿಕ್ಕಬಾಸೂರು ಗ್ರಾಪಂ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ 2012-13ನೇ ಸಾಲಿನಲ್ಲಿ ಈವರೆಗೂ ನಡೆದ ಖಾತ್ರಿ ಯೋಜನೆಯಡಿ ಕಾಮಗಾರಿಗಳ ಕುರಿತು ಕಡತ ಹಾಗೂ ಸ್ಥಳ ಪರೀಶಿಲನೆ ನಡೆಸಿದರು. ಈ ಸಂದರ್ಭದಲ್ಲಿ ಘಟನೆಗೆ ಕಾರಣ ಎನ್ನಲಾದ ಅಭಿವೃದ್ಧಿ ಅಧಿಕಾರಿ ಬಿ.ಎಸ್. ಹೊನ್ನತ್ತಿ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದರು. ಈ ಸಂದರ್ಭ ಪತ್ರಿಕೆಯೊಂದಿಗೆ ಎನ್‌ಆರ್‌ಇಜಿ ಯೋಜನೆಯ ಸಹಾಯಕ ನಿರ್ದೇಶಕ ಎನ್. ಅಮರಪ್ಪ ಮಾತನಾಡಿ, ಯೋಜನೆಯಡಿ ಯಾವುದೇ ಕೂಲಿ ಕಾರ್ಮಿಕ ಅಥವಾ ರೈತನಿಗೆ ಅಧಿಕಾರಿಗಳಿಂದ ಅನ್ಯಾಯವಾಗುವುದನ್ನು ಸಹಿಸಲು ಸಾಧ್ಯವಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತಕ್ರಮ ಜರುಗಿಸುವುದಾಗಿ ಭರವಸೆ ನೀಡಿದರಲ್ಲದೇ, ಖುದ್ದಾಗಿ ರೈತರ ಹೊಲಗಳನ್ನು ವೀಕ್ಷಿಸುವುದಾಗಿ ತಿಳಿಸಿದರು. ತಂಡದಲ್ಲಿ ಸವಣೂರು ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕಾಧಿಕಾರಿ ಎಸ್.ಆರ್. ಪಾಟೀಲ ಇನ್ನಿತರ ಸಿಬ್ಬಂದಿ ಉಪಸ್ಥಿತರಿದ್ದರು.