ಡೆಂಘೀ ನಿಯಂತ್ರಿಸಲು ವಿಫಲ: ಪ್ರತಿಭಟನೆ
ಹಾವೇರಿ: ಡೆಂಘೀ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು, ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಡೆಂಘೀಯಿಂದಾಗಿ ಜಿಲ್ಲೆಯಲ್ಲಿನ ಮಕ್ಕಳು ಸಾವನ್ನಪ್ಪಿದ್ದರೂ, ಶ್ರೀಸಾಮಾನ್ಯರನ್ನು ಬಚಾವ್ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದರಿಂದಾಗಿ ಜಿಲ್ಲೆಯ ಜನ ಜ್ವರ ಕಾಣಿಸಿಕೊಂಡರೆ ಸಾಕು ಬೆಚ್ಚಿಬೀಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶ್ರೀಸಾಮಾನ್ಯರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ವೇಳೆ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.