ಹದಗೆಟ್ಟ ರಸ್ತೆ: ಜಿಪಂ ಕಚೇರಿಗೆ ಮುತ್ತಿಗೆ
ರಾಣಿಬೆನ್ನೂರು: ತಾಲೂಕು ಕೇಂದ್ರದಿಂದ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳು ಹಾಳಾಗಿದ್ದು, ಅವುಗಳನ್ನು ಸರಿಪಡಿಸಬೇಕೆಂದು ಹಾಗೂ ಬೇಸಿಗೆ ಕಾಲವಾದ್ದರಿಂದ ತಾಲೂಕಾದ್ಯಂತ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ತಾಲೂಕು ರೈತ ಸಂಘದ ಕಾರ್ಯಕರ್ತರು ಇಲ್ಲಿನ ಜಿಪಂ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ: ಪ್ರತಿಭಟನೆ ನೇತೃತ್ವ ವಹಿಸಿದ್ದ ರಾಜ್ಯ ರೈತಸಂಘದ ಸಂಘಟನಾ ಕಾರ್ಯದರ್ಶಿ ರವಿಂದ್ರಗೌಡ ಪಾಟೀಲ ಮಾತನಾಡಿ, ಪ್ರಸಕ್ತ ಬೇಸಿಗೆ ಸಮಯವಾದ್ದರಿಂದ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಯಾವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂಬುದರ ಕುರಿತು ಸೂಕ್ತ ಮಾಹಿತಿ ಪಡೆದು ಆ ಗ್ರಾಮದಲ್ಲಿನ ಜನ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿಯುವ ನೀರನ್ನು ಪೂರೈಸಬೇಕು. ಈ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗದಿರುವ ಕಾರಣ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ತೀವ್ರವಾಗಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ದೂರಿದರು.
ಸಂಕಷ್ಟದಲ್ಲಿ ಹಳ್ಳಿಗಳು: ಕಳೆದ 4 ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಾ ಬಂದಿರುವ ತಾಲೂಕಿನ ಮಣಕೂರು, ಲಿಂಗದಹಳ್ಳಿ, ಇಟಗಿ, ಸುಣಕಲ್ಲಬಿದರಿ, ಹೊನ್ನತ್ತಿ, ಕೆರಿಮಲ್ಲಾಪುರ, ತರೇದಹಳ್ಳಿ, ಕೋಟಿಹಾಳ, ಬೆನಕನಕೊಂಡ ಸೇರಿ ಸುಮಾರು 40 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಜನತೆ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.
ಡಿಸಿ ಕಚೇರಿ ಎದುರು ಪ್ರತಿಭಟನೆ ಎಚ್ಚರಿಕೆ: ಶೀಘ್ರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹಾಗೂ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಲು ಅಧಿಕಾರಿಗಳು ಮುಂದಾಗಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದೆಂದು ಎಚ್ಚರಿಸಿದರು.
ರಸ್ತೆಗಳನ್ನು ಸರಿಪಡಿಸಿ: ರೈತ ಸಂಘದ ಸಂಚಾಲಕ ಶಿವಾನಂದ ಲಿಂಗದಹಳ್ಳಿ ಮಾತನಾಡಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಣಿಬೆನ್ನೂರು, ಡಿಪೋಗಳ ವ್ಯವಸ್ಥಾಪಕರು ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಬಸ್ ಓಡಿಸಲು ಒಪ್ಪದಿದ್ದ ಕಾರಣ, ಗ್ರಾಮೀಣ ಜನತೆ, ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ರಸ್ತೆಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿದರು.
ಸರಿಪಡಿಸುತ್ತೇವೆ: ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಜಿಪಂ ಸಹಾಯಕ ಕಾರ್ಯಪಾಲಕ ಅಭಿಯಂತರ ಮಾತನಾಡಿ, ತಾಲೂಕಾದ್ಯಂತ ಕುಡಿಯುವ ಸಮಸ್ಯೆಗೆ ವಿದ್ಯುತ್ ಸಮಸ್ಯೆ ಕಾರಣವಾಗಿದೆ. ಮುಂದಿನ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರಿಂದ, ಪ್ರತಿಭಟನೆ ಹಿಂಪಡೆಯಲಾಯಿತು.