ಇಂದು ಬಿಜೆಪಿ ಸಮಾವೇಶ
ಹಾವೇರಿ: ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಮಾ. 24ರಂದು ಜಿಲ್ಲಾಮಟ್ಟದ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಕ್ಷದ ಸಂಘಟನೆಗೋಸ್ಕರ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಭೋಜರಾಜ ಕರೂದಿ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ಮಾತನಾಡಿ, ಪಕ್ಷವನ್ನು ಬಲಪಡಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.
ರಾಷ್ಟ್ರೀಯ ಪರಿಷತ್ ಸದಸ್ಯ ಸಿದ್ದರಾಜ ಕಲಕೋಟಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಂದ್ರ ಕಟಕೋಳ, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲೇಶಪ್ಪ ಹರಿಜನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭು ಹಿಟ್ನಳ್ಳಿ, ರಾಮಣ್ಣ ಉಕ್ಕುಂದ, ಸ್ಲಂ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ಪೇಲನವರ, ಶಿವಣ್ಣ ಮಾಸೂರ, ಶಿವಲಿಂಗಪ್ಪ ಕಲ್ಯಾಣಿ, ಭಾರತಿ ಜಂಬಗಿ, ಜ್ಯೋತಿ ಸಾತೇನಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.