ಹಾಸ್ಟೆಲ್ ಪ್ರವೇಶ: ಅರ್ಜಿ ಆಹ್ವಾನ
ಹಾವೇರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಾವೇರಿ ತಾಲೂಕಿನಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕೀಯರ ವಿದಾರ್ಥಿ ನಿಲಯ ಹಾಗೂ ಸರ್ಕಾರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ದಿನಾಂಕ ಇದೇ ಮೇ 30ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಾಗೇಂದ್ರನಮಟ್ಟಿ, ಕಬ್ಬೂರ, ಹೊಸರಿತ್ತಿ, ಮೇವುಂಡಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಹಾವೇರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ 5ನೇ ತರಗತಿಯಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಾವೇರಿಯಲ್ಲಿರುವ ಸರಕಾರಿ ವಸತಿ ಶಾಲೆಗೆ ಒಂದನೇ ತರಗತಿಯಿಂದ ಐದನೇ ತರಗತಿ ಬಾಲಕ ಹಾಗೂ ಬಾಲಕಿಯರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ, ಉಪಾಹಾರ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಹಾಸಿಗೆ ಹಾಗೂ ಸಮವಸ್ತ್ರ ನೀಡಲಾಗುವುದು. ಅರ್ಜಿಯೊಂದಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಹಾಗೂ 2012-13ನೇ ಸಾಲಿನಲ್ಲಿ ತೇರ್ಗಡೆಯಾದ ಅಂಕಪಟ್ಟಿ ಲಗತ್ತಿಸಬೇಕೆಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಹಾವೇರಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಅಥವಾ ಸಂಬಂಧಪಟ್ಟ ವಸತಿ ನಿಲಯಗಳ ಮೇಲ್ವಿಚಾರಕರಿಂದ ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.