ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿ
ಹಾವೇರಿ: ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರಿನ ಚ್ಯಾಂಕ್‌ಗಳನ್ನು ಸ್ವಚ್ಛಗೊಳಿಸಿ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ವ್ಯವಸ್ಥೆ ಮಾಡಬೇಕೆಂದು ಜಿಪಂ ಕಾರ್ಯನಿರ್ವಾಹಕ ಅಭಿಯಂತರಿಗೆ ಹಾವೇರಿ ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಅನುಕೂಲವಾಗುವಂತೆ ಸಮರ್ಪಕ ವಿದ್ಯುತ್ ಪೂರೈಸಿ ಸಹಕರಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೂ ಆದೇಶಿಸಿದರು.
ಕಾಮಗಾರಿ ಶಂಕುಸ್ಥಾಪನೆ/ ಅಡಿಗಲ್ಲು ಕಾರ್ಯಕ್ರಮ ನೆರವೇರಿಸುವ ವೇಳೆ ಶಿಷ್ಟಾಚಾರ ಪಾಲಿಸಬೇಕು. ಚುನಾಯಿತ ಪ್ರತಿನಿಧಿಗಳನ್ನು ಕಡ್ಡಾಯ ಆಹ್ವಾನಿಸಬೇಕೆಂದು ತಿಳಿಸಿದರು.
1ರಿಂದ 5ನೇ ತರಗತಿ ಮಕ್ಕಳ ದಾಖಲಾತಿ ಸಂಖ್ಯೆ, ಮಧ್ಯದಲ್ಲಿ ಶಾಲೆಬಿಟ್ಟ ಮಕ್ಕಳ ಸಂಖ್ಯೆ, 6ರಿಂದ 8ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಗಮನಿಸಿದಾಗ ಸರ್ವಶಿಕ್ಷಣ ಅಭಿಯಾನ ಮತ್ತು ಅಕ್ಷರ ದಾಸೋಹ ದಿಂದಾಗಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಪ್ರಗತಿ ಸಾಧಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ 509 ಶಾಲಾ ಕಟ್ಟಡಗಳ ಆಧುನೀಕರಣಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 48 ತಜ್ಞ ವೈದ್ಯರ ಮತ್ತು 8 ಸಾಮಾನ್ಯ ಕರ್ತವ್ಯ ವೈದ್ಯರ ಹುದ್ದೆ ಭರ್ತಿ ಮಾಡಲು ಸರ್ಕಾರಕ್ಕೆ ಪತ್ರ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದರು.
ರೈತರಿಗೆ ಸಹಾಯಧನ, ಕೃಷಿ ಮೇಳ ಮತ್ತು ಪ್ರದರ್ಶನದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವಂತೆ ತಾಪಂನ ಸಹಾಯಕ ಕೃಷಿ ನಿರ್ದೇಶಕರಿಗೆ ಸೂಚಿಸಿದ್ದಾಗಿ ಜಂಟಿ ಕೃಷಿ ನಿರ್ದೇಶಕರು ಹೇಳಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಪಂ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಕಾಲನಿಗಳಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ರು. 13.28 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್ ಅಂತ್ಯಕ್ಕೆ ರು. 2.85 ಲಕ್ಷ ವ್ಯಯಿಸುವ ಗುರಿ ಇತ್ತು. ರು. 1 ಲಕ್ಷದ ಕಾಮಗಾರಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಹೊಸ ಪಡಿತರ ಚೀಟಿಗಾಗಿ 81,237 ಅರ್ಜಿ ಬಂದಿವೆ. ಈ ಪೈಕಿ 46,416ನ್ನು ಪರಿಶೀಲಿಸಿ 29,663 ಬಿಪಿಎಲ್, 9,664 ಎಪಿಎಲ್ ಪಡಿತರ ಚೀಟಿ ನೀಡಲಾಗಿದೆ. 7087 ಅರ್ಜಿ ತಿರಸ್ಕರಿಸಲಾಗಿದೆ. 30,306 ಅರ್ಜಿಗಳನ್ನು ಬೇಗನೆ ಪರಿಶೀಲಿಸುವಂತೆ ಎಫ್.ಎಲ್.ಓ.ಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.
ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಜಿಪಂ ಮುಖ್ಯ ಯೋಜನಾಧಿಕಾರಿ ಬಸನಗೌಡ್ರಗೆ ಜಿಪಂ ಅಧ್ಯಕ್ಷರು ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳಿಂದ ಕನ್ನಡ ಅನುಷ್ಠಾನದ ವರದಿಯನ್ನು ಪ್ರತಿ ತಿಂಗಳೂ ತರಿಸಿಕೊಂಡು ಜಿಪಂ ಯೋಜನಾಧಿಕಾರಿಗೆ ನೀಡಬೇಕೆಂದು ಸಿಇಒ ಕೆ.ಬಿ. ಆಂಜನಪ್ಪ ಸೂಚಿಸಿದರು. ಜಿಲ್ಲಾ, ತಾಲೂಕು ಕ್ರೀಡಾಂಗಣಗಳ ಸ್ವಚ್ಛತೆ ಕಾಪಾಡುವಂತೆ ಜಿಪಂ ಉಪಕಾರ್ಯದರ್ಶಿ ಗೋವಿಂದಸ್ವಾಮಿ ಜಿಲ್ಲಾ ಕ್ರೀಡಾಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಡಾ ಶೋಭಾ ನಿಸ್ಸೀಮಗೌಡ್ರ, ಯೋಜನಾ ನಿರ್ದೇಶಕ ಶಿರಹಟ್ಟಿ ಇದ್ದರು.