ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮಕ್ಕಳಿಗೆ ಶಿಕ್ಷಣವೇ ಸಂಪತ್ತು: ನ್ಯಾ. ಪಾಟೀಲ

Lingaraj Badiger
Updated On : 19 Nov 2013, 10:49 am

ಕನ್ನಡಪ್ರಭ ವಾರ್ತೆ, ಹಾವೇರಿ, ನ. 18
ಪಾಲಕರು ಆಸ್ತಿ, ಅಂತಸ್ತು ಗಳಿಸಿ ವರ್ಚಸ್ಸು ಹೆಚ್ಚಿಸಿಕೊಳ್ಳುವ ಬದಲು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ನಾಡಿನ ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎನ್.ಎಸ್. ಪಾಟೀಲ ಹೇಳಿದರು.
ನಗರದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ. 2ರಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ ಭೌತಿಕ ಸಂಪತ್ತಿನ ಬೆನ್ನು ಹಿಂದೆ ಬಿದ್ದು ಭವಿಷ್ಯದ ನಿಜವಾದ ಸಂಪತ್ತಾದ ಶಿಕ್ಷಣವನ್ನು ಕಡೆಗಣಿಸಿದ್ದಾನೆ. ಇದರಿಂದ ಸಮಾಜದಲ್ಲಿ ಅನಕ್ಷರತೆ ಹಾಗೂ ಅಪರಾಧಗಳು ಹೆಚ್ಚಿ, ದೇಶದ ಆರ್ಥಿಕ ಬೆಳವಣಿಗೆಗೆ ಹಿನ್ನಡೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಪಾಲಕರು ಮಕ್ಕಳನ್ನು ಟಿವಿ, ಸಿನಿಮಾ ಹಾವಳಿಯಿಂದ ದೂರವಿರಿಸಿ, ಉತ್ತಮ ಮೌನವೀಯ ಮೌಲ್ಯಗಳನ್ನು ಬೆಳೆಸಬೇಕು. ಮನೆಯಲ್ಲಿ ಕಲಿಕಾ ಪರಿಸರ ನಿರ್ಮಿಸುವ ಮೂಲಕ ಮಕ್ಕಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಡಿ.ಆರ್. ರೇಣುಕೆ ಮಾತನಾಡಿ, ಮಕ್ಕಳಲ್ಲಿ ಅಧ್ಯಯನ ಪ್ರವೃತ್ತಿ ಕಡಿಮೆಯಾಗುತ್ತಿದೆ. ಶಿಕ್ಷಕರು ಮಕ್ಕಳಿಗೆ ಮಹಾನ್ ವ್ಯಕ್ತಿಗಳ ಆದರ್ಶಗಳ ಬಗ್ಗೆ ತಿಳಿಸಿಕೊಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಮಾಲತೇಶ ಕರ್ಜಗಿ ಮಾತನಾಡಿ, ಮಕ್ಕಳಿಗೆ ನಾವು ಎಂತಹ ಶಿಕ್ಷಣ ಹಾಗೂ ಸಂಸ್ಕಾರ ನೀಡುತ್ತೇವೋ ಅದನ್ನೇ ಅವರು ಅನುಕರಣೆ ಮಾಡುತ್ತಾರೆ. ಮಕ್ಕಳಲ್ಲಿ ಕಾನೂನು ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಂಡಿದ್ದು ಸಂತಸ ತಂದಿದೆ ಎಂದು ತಿಳಿಸಿದರು.
ವಕೀಲರ ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್. ಹಿರೇತನದ ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಕುರಿತು ಹಾಗೂ ಜಿಲ್ಲಾ ಶಿಶು ಅಭಿವೃದ್ಧಿ ಅಧಿಕಾರಿ ಲಲಿತಾ ಡಿ.ಎಚ್. ಮಕ್ಕಳ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement