ಪೈಕಾ ಮಹಿಳಾ ಕ್ರೀಡಾಹಬ್ಬಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ, ಹಾವೇರಿ, ನ. 27
ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಲ್ಲೂ ಕ್ರೀಡಾ ಮನೋಭಾವನೆ ಇರಬೇಕು. ಗ್ರಾಮೀಣ ಭಾಗದ ಮಹಿಳಾ ಕ್ರೀಡಾಪಟುಗಳು ಕ್ರೀಡಾಕೂಟಗಳಲ್ಲಿ ಉನ್ನತ ಸಾಧನೆ ಮೆರೆಯಬೇಕು ಎಂದು ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಕರೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಮಂತ್ರಾಲಯ ನವದೆಹಲಿ, ಪೈಕಾ ನಿರ್ದೇಶನಾಲಯ, ಭಾರತ ಕ್ರೀಡಾ ಪ್ರಾಧಿಕಾರ ಪಟಿಯಾಲ, ಹಾವೇರಿ ಜಿಲ್ಲಾಡಳಿತ, ಜಿಪಂ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ಹಮ್ಮಿಕೊಂಡಿರುವ 39ನೇ ರಾಷ್ಟ್ರ ಮಟ್ಟದ ಮಹಿಳಾ ಪೈಕಾ ಕ್ರೀಡಾಕೂಟ ಗುಂಪು-4ರ ಖೋಖೋ, ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾವಳಿಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಕವಾಗಿ ಸದೃಢರಾಗಲು ಸಾಧ್ಯ. ಸರ್ಕಾರ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸಲು ಮುಂದಾಗಿದೆ. ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿರುವ ಕ್ರೀಡಾಪಟುಗಳು ಉತ್ತಮ ನಡವಳಿಕೆ ಪ್ರದರ್ಶಿಸಿ, ಸಾಮರ್ಥ್ಯ ಮೆರೆಯಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಉತ್ತರ ಕರ್ನಾಟಕ ಹೆಬ್ಬಾಗಿಲಾದ ಐತಿಹಾಸಿಕ ಹಾವೇರಿ ನಗರದಲ್ಲಿ ರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮಿಂಚಲಿ ಎಂದು ಹಾರೈಸಿದರು.
ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಮಾತನಾಡಿ, ಕ್ರೀಡಾಕೂಟಕ್ಕೆ 19 ರಾಜ್ಯಗಳಿಂದ 687 ಕ್ರೀಡಾಪಟುಗಳು ಆಗಮಿಸಿದ್ದಾರೆ. ಈ ಕ್ರೀಡಾಕೂಟದ ತಯಾರಿಗೆ ಎಲ್ಲ ಸಂಘ-ಸಂಸ್ಥೆ, ಸಾರ್ವಜನಿಕರು ಹಾಗೂ ಅಧಿಕಾರಿಗಳು ಶ್ರಮಿಸಿದ್ದಾರೆ. ನ. 30ರವರೆಗೆ ನಡೆಯುವ ಕ್ರೀಡಾಕೂಟಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೋರಿದರು.
ನಗರಸಭೆ ಅಧ್ಯಕ್ಷ ಐ.ಯು. ಪಠಾಣ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಜಗಮಯ್ಯ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ. ಆಂಜನಪ್ಪ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೆ. ಮುತ್ತುಕಾಮಾಚ್ಚಿ, ಪೈಕಾ ತಾಂತ್ರಿಕ ಸಲಹೆಗಾರ ಎಂ.ಆರ್. ಮೋಹಿತೆ ಇದ್ದರು.
ಪೈಕಾ ಕ್ರೀಡಾಕೂಟದ ಸಹಾಯಕ ನಿರ್ದೇಶಕ ಎಂ.ಸಿ. ರಮೇಶ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ತಹಸೀಲ್ದಾರ ಪಂಪನಗೌಡ ಮೇಲ್ಸೀಮೆ ವಂದಿಸಿದರು.
ಕ್ರೀಡಾ ಸಚಿವರ ಸಂದೇಶ
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ಭಾಗವಹಿಸಿರುವ ಯುವಜನ ಸೇವಾ ಮತ್ತು ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ ಕ್ರೀಡಾಪಟುಗಳಿಗೆ ಶುಭ ಸಂದೇಶ ಕಳುಹಿಸಿದ್ದು, ಎಲ್ಲ ಕ್ರೀಡಾಪಟುಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ, ಗೆಲುವು ಸೋಲುಗಳನ್ನು ಸಮನಾಗಿ ಸ್ವೀಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಸಂಘಟಕರೊಂದಿಗೆ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಸಹಕಾರ ನೀಡಲಿದೆ. ಕ್ರೀಡಾಕೂಟ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಿ ಎಂದಿದ್ದಾರೆ.