ಪಕ್ಷವಿರೋಧಿಗಳ ಮೇಲೆ ಶಿಸ್ತುಕ್ರಮಕ್ಕೆ ಶಿಫಾರಸು: ಬಸವರಾಜ ಕೆಲಗಾರ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಅ. 24
ಅಧಿಕೃತವಾಗಿ ಬಿಜೆಪಿಯ ಬಿ ಫಾರಂ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾಗಿದ್ದರೂ ತಾವು ಬಿಜೆಪಿಯಲ್ಲ, ಕೆಜೆಪಿ ಎನ್ನುತ್ತಿರುವ ಹಾಗೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಜಿಪಂ ಹಾಗೂ ತಾಪಂ ಸದಸ್ಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ರಾಜ್ಯಾಧ್ಯಕ್ಷರಿಗೆ ಪತ್ರ ಬರೆಯಲು ನಿರ್ಧರಿಸಿದ್ದಾಗಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ ಬಸವರಾಜ ಕೆಲಗಾರ ಹೇಳಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜನರ ಶಾಂತಿ-ನೆಮ್ಮದಿಗೆ ಭಂಗ ತಂದಿದೆ. ಮಂತ್ರಿಗಳು ಹಗರಣಗಳಲ್ಲಿ ಸಿಲುಕಿದ್ದಾರೆ. ಆದರೂ ಅವರನ್ನು ರಕ್ಷಿಸಲು ಪ್ರಧಾನಿ ಮನಮೋಹನ ಸಿಂಗ್ ಮೌನ ವಹಿಸಿದ್ದಾರೆ ಎಂದು ಟೀಕಿಸಿದರು.
ಗುರಿಯಲ್ಲಿ ಸ್ಪಷ್ಟತೆ, ವಿಚಾರದಲ್ಲಿ ಬದ್ಧತೆ, ಅನುಷ್ಠಾನದಲ್ಲಿ ಪ್ರಾಮಾಣಿಕತೆ ಹೊಂದಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದ ಬಳಿಕ ಜನತೆ ಜಾತಿ-ಭೇದ ಮರೆತು ತಮ್ಮ ಬೆಂಬಲವನ್ನು ತೋರಿಸುತ್ತಿದ್ದಾರೆ. ಜಿಲ್ಲಾದ್ಯಂತ ಪಕ್ಷದ ಬಲವರ್ಧನೆಗೆ ಜಾಥಾ ಹಮ್ಮಿಕೊಳ್ಳಲಾಗುವುದು. ಹಳ್ಳಿ ಹಳ್ಳಿಗೆ ತೆರಳಿ ಪಕ್ಷವನ್ನು ಸಂಘಟಿಸುವುದಾಗಿ ತಿಳಿಸಿದರು.