ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಸಿಗುತ್ತಿಲ್ಲ
ಹಿರೇಕೆರೂರ: ಇಂದಿನ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಸಿಗುತ್ತಿಲ್ಲ. ನೌಕರಿ ಪಡೆಯಲು ವಿದ್ಯಾಭ್ಯಾಸ ಮಾಡಲಾಗುತ್ತಿದೆ. ವಿದ್ಯಾಭ್ಯಾಸದ ಜತೆಗೆ ಮಾನವೀಯ ಮೌಲ್ಯಗಳನ್ನು ಎಲ್ಲರೂ ರೂಢಿಸಿಕೊಳ್ಳಬೇಕು ಎಂದು ರಾಣಿಬೆನ್ನೂರಿನ ಬಿಎಜೆಎಸ್‌ಎಸ್ ಮಹಿಳಾ ಕಾಲೇಜಿನ ಜಿ.ಕೆ. ಗೌಡರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆದ 2013-14ನೇ ಸಾಲಿನ ಪಠ್ಯೇತರ ಚಟುವಟಿಕೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ಯುವ ಪೀಳಿಗೆಯ ದೃಷ್ಟಿಕೋನ ಬದಲಾಗಿದೆ. ಸರ್ಕಾರದ ಎಲ್ಲ ಯೋಜನೆಗಳು ತಮಗೆ ಸಿಗಬೇಕೆಂಬ ಮಹದಾಸೆ ಅವರದ್ದಾಗಿದೆ. ಇಂತಹ ಸೌಲತ್ತುಗಳನ್ನು ಸರಿಯಾದ ಹಾದಿಯಲ್ಲಿ ವಿನಿಯೋಗ ಮಾಡಿಕೊಳ್ಳಬೇಕು ಎಂದರು.
ನೈತಿಕ ಶಿಕ್ಷಣದ ಕೊರತೆ ಎಲ್ಲೆಡೆ ಎದ್ದು ಕಾಣುತ್ತಿದೆ. ಮಾನವೀಯ ಮೌಲ್ಯಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಸಂಸ್ಕಾರ, ಸಂಸ್ಕೃತಿ, ಸಂಬಂಧಗಳು ದೂರವಾಗುತ್ತಿದ್ದು, ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ ಇದು ವಿಷಾದಿಸಿದರು. ಸಾಂಸ್ಕೃತಿಕ ವಿಭಾಗದ ಸಂಚಾಲಕ ಎಲ್.ಎಂ. ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಎಸ್.ಎಚ್. ದೊಡ್ಡಗೌಡರ ವಾರ್ಷಿಕ ವರದಿ ಮಂಡಿಸಿದರು. ಇದೇ ಸಂದರ್ಭದಲ್ಲಿ ಹಲವಾರು ವಿದ್ಯಾರ್ಥಿಗಳು ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಮೂಲಕ ಹಂಚಿಕೊಂಡರು. ಕಾಲೇಜಿನ ಪ್ರಾಚಾರ್ಯ ಜಿ.ಕೆ. ವೆಂಕಟೇಶ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಸಿಡಿಸಿ ಸದಸ್ಯ ಬಿ.ಎನ್. ಭರಮಗೌಡರ, ಕ್ರೀಡಾ ವಿಭಾಗದ ದೈಹಿಕ ಶಿಕ್ಷಣ ನಿರ್ದೇಶಕ ಪ್ರಸನ್ನಕುಮಾರ ಡಿ.ಆರ್., ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಉಪನ್ಯಾಸಕರಾದ ಆರ್.ಎಸ್. ಚಕ್ಕಿ, ದಿನೇಶ ವಿ., ಎಸ್.ಬಿ. ಭಜಂತ್ರಿ ವಂದಿಸಿದರು.