ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮೂಲಸೌಲಭ್ಯ, ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹ

Srinivasa Murthy VN
Updated On : 3 Feb 2014, 11:42 am

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಫೆ. 2
ಪಟ್ಟಣದ ರೇಲ್ವೆ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಆಗ್ರಹಿಸಿ ರೇಲ್ವೆ ಸುಧಾರಣಾ ಸಮಿತಿ ಮತ್ತು ಬಳಕೆದಾರರ ಸಂಘದ ಪದಾಧಿಕಾರಿಗಳು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ. ಸೆಂಥಿಲ್‌ಕುಮಾರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಡಾ. ಪ್ರಕಾಶ ಭಸ್ಮೆ ಮಾತನಾಡಿ, ರೇಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಡಿಯುವ ನೀರು, ಕುಳಿತುಕೊಳ್ಳಲು ಆಸನ, ಮಹಿಳಾ ಪ್ರಯಾಣಿಕರಿಗೆ ವಿಶ್ರಾಂತಿ ಗೃಹ ಹಾಗೂ ಶೌಚಾಲಯಗಳಿಲ್ಲ. ಎರಡೂ ಪ್ಲಾಟ್‌ಫಾರಂಗಳಲ್ಲಿ ನೆರಳಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.
ಉಪಾಧ್ಯಕ್ಷ ಮಾಲತೇಶ ಅರಳೀಮಟ್ಟಿ ಮಾತನಾಡಿ, ಪ್ಲಾಟ್‌ಫಾರಂ 2ರಲ್ಲಿ ವಿದ್ಯುತ್ ದೀಪಗಳ ಕೊರತೆಯಿಂದ ರಾತ್ರಿ ಸಮಯದಲ್ಲಿ ಪ್ರಯಾಣಿಕರು ಪರಿತಪಿಸುವಂತಾಗಿದೆ. ಅಲ್ಲದೇ ಸದರಿ ಪ್ಲಾಟ್‌ಫಾರಂಗೆ ತೆರಳಲು ಮೇಲ್ಸೇತುವೆ ಇಲ್ಲದ್ದರಿಂದ ರೇಲ್ವೆ ಟ್ರ್ಯಾಕ್ ಬಳಸಿ ತೆರಳಬೇಕಾಗಿದ್ದು ಕೂಡಲೇ ಮೇಲ್ಸೇತುವೆ ನಿರ್ಮಿಸುವಂತೆ ಆಗ್ರಹಿಸಿದರು.
ಮೋಟೆಬೆನ್ನೂರು-ಬ್ಯಾಡಗಿ ನಡುವಿನ ಲೆವೆಲ್ ಕ್ರಾಸಿಂಗ್ ಬಳಸಿ ಸಂಚರಿಸುವ ವಾಹನಗಳ ಸಂಖ್ಯೆ ಪ್ರತಿದಿನಕ್ಕೆ 3 ಸಾವಿರ ದಾಟುತ್ತಿದ್ದು, ಇದರಿಂದ ವಾಹನ ಸಂಚಾರರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಮೇಲ್ಸೇತುವೆ ನಿರ್ಮಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹಿಸಿದರು.
ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ಬ್ಯಾಡಗಿ ರೇಲ್ವೆ ನಿಲ್ದಾಣದಲ್ಲಿ ಇತ್ತೀಚೆಗೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ದೂರದ ನಗರಗಳಿಂದ ಸಾಕಷ್ಟು ಪ್ರಯಾಣಿಕರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಬ್ಯಾಡಗಿ ನಿಲ್ದಾಣದಲ್ಲಿ ವೇಗದ ರೈಲುಗಳ ನಿಲುಗಡೆಗೆ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಸೆಂಥಿಲ್‌ಕುಮಾರ, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತಕ್ರಮ ಜರುಗಿಸುವ ಭರವಸೆ ನೀಡಿದರು. ನಿಲ್ದಾಣಾಧಿಕಾರಿ ಹಿರೇಮಠ ಇನ್ನಿತರ ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement