ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಬೇಡಿಕೆ ಈಡೇರಿಸಿ: ಬಿಸಿಯೂಟ ನೌಕರರ ಪ್ರತಿಭಟನೆ

Lingaraj Badiger
Updated On : 6 Jan 2014, 12:42 pm

ಕನ್ನಡಪ್ರಭ ವಾರ್ತೆ, ಹಾವೇರಿ, ಜ. 5
ಬಿಸಿಯೂಟ ಅಡುಗೆ ತಯಾರಕರಿಗೆ ಕನಿಷ್ಠ ವೇತನ, ಸೇವಾಭದ್ರತೆ ಹಾಗೂ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಎಐಟಿಯುಸಿ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬಿಸಿಯೂಟ ನೌಕರರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮುರುಘರಾಜೇಂದ್ರ ಮಠದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಮೈಲಾರ ಮಹಾದೇವ ವೃತ್ತ, ಮಹಾತ್ಮ ಗಾಂಧಿ ವೃತ್ತ ಹಾಗೂ ಜೆ.ಪಿ. ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬಸ್ ನಿಲ್ದಾಣಕ್ಕೆ ತೆರಳಿದರು. ಬಸ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಪಂ ಸಿಇಒಗೆ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.
ಸೌಲಭ್ಯ ಕೊಡಿ: ಒಕ್ಕೂಟದ ಜಿಲ್ಲಾ ಸಮಿತಿ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮಾತನಾಡಿ, ಬಿಸಿಯೂಟ ಅಡುಗೆ ಸಿಬ್ಬಂದಿಗೆ ಕನಿಷ್ಠ ವೇತನ, ಇತರ ಸೌಲಭ್ಯ ನೀಡುವಂತೆ ಒತ್ತಾಯಿಸಿ ಹಲವು ಬಾರಿ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸಿಲ್ಲ. ಅಡುಗೆ ಅನಿಲ ಹಾಗೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಅಲ್ಪ ವೇತನ ಪಡೆಯುತ್ತಿರುವ ಬಿಸಿಯೂಟ ತಯಾರಕರು ಜೀವನ ನಡೆಸುವುದು ದುಸ್ತರವಾಗಿದೆ. ಕನಿಷ್ಠ ವೇತನ ಕೊಡದಿರುವ ರಾಜ್ಯ ಸರ್ಕಾರ ಮಹಿಳಾ ವಿರೋಧಿ ನೀತಿ ಹಾಗೂ ಕಾರ್ಮಿಕ ವಿರೋಧಿ ನೀತಿ ಕೈಬಿಡಬೇಕು. ಅಡುಗೆ ಸಿಬ್ಬಂದಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ನೀಡುವ ಕಿರುಕುಳ ತಡೆಗಟ್ಟಬೇಕೆಂದರು.
ರು. 10 ಸಾವಿರ ವೇತನ: ಬಿಸಿಯೂಟ ಅಡುಗೆ ಸಿಬ್ಬಂದಿಗೆ ಮಾಸಿಕ ರು. 10 ಸಾವಿರ ವೇತನ ನೀಡಬೇಕು. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಡುಗೆ ಸಿಬ್ಬಂದಿ ನೇಮಿಸಿಕೊಳ್ಳಬೇಕು. ತಮಿಳುನಾಡು ಮಾದರಿಯಲ್ಲಿ ನಿವೃತ್ತಿ ವೇತನ ಸೌಲಭ್ಯ ಕಲ್ಪಿಸಬೇಕು. ಅಡುಗೆ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟರೆ ಅಥವಾ ಅಂಗವೈಕಲ್ಯರಾದಲ್ಲಿ ರು. 1.50 ಲಕ್ಷ ಪರಿಹಾರ ನೀಡುವ ಯೋಜನೆ ಜಾರಿಗೆ ತರಬೇಕು. ಸರ್ಕಾರಿ ನೌಕರಿಗೆ ನೀಡುವ ಹೆರಿಗೆ-ವೈದ್ಯಕೀಯ ಭತ್ಯೆ, ಭವಿಷ್ಯ ನಿಧಿ ಇಎಸ್‌ಐ ಹಾಗೂ ವಾರ್ಷಿಕ ರಜಾ ದಿನ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.
ಫೆಡರೇಶನ್ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸರೋಜಮ್ಮ ಹಿರೇಮಠ, ರಾಣಿಬೆನ್ನೂರು ತಾಲೂಕು ಅಧ್ಯಕ್ಷೆ ರಾಜೇಶ್ವರಿ ದೊಡ್ಡಮನಿ, ಸವಣೂರು ತಾಲೂಕು ಕಾರ್ಯದರ್ಶಿ ಜಿ.ಡಿ. ಪೂಜಾರ, ರೇಖಾ ಬೆನ್ನೂರ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement