ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅಧಿಕಾರಿಗಳ ನಿರ್ಲಕ್ಷ್ಯ: ಕಾರ್ಮಿಕರಿಗೆ ಸೌಲಭ್ಯವಿಲ್ಲ

Lingaraj Badiger
Updated On : 17 Jan 2014, 11:16 am

ಹಾವೇರಿ: ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಟ್ಟಡ ಕಾರ್ಮಿಕರಿಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಕಾನೂನಿನ ವ್ಯಾಪ್ತಿಯಲ್ಲಿ ಎಲ್ಲ ಸೌಲಭ್ಯಗಳನ್ನು ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕೊಡಿಸುವುದಾಗಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ದೇಶಕ ಎಂ. ಪರಮೇಶ್ವರಪ್ಪ ಭರವಸೆ ನೀಡಿದರು.
ನಗರದ ಹುಕ್ಕೇರಿ ಮಠದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಕಟ್ಟಡ ಕಾರ್ಮಿಕರ ಒಕ್ಕೂಟದ ಜಿಲ್ಲಾ ಪ್ರಥಮ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಅನುದಾನಕ್ಕೆ ಕೊರತೆಯಿಲ್ಲ. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದ ಅದು ಫಲಾನುಭವಿಗಳನ್ನು ತಲುಪುತ್ತಿಲ್ಲ. ಅಧಿಕಾರಿಗಳು ಕಾರ್ಮಿಕರಿಗೆ ಧನಸಹಾಯ ನೀಡಲು ವಿಳಂಬ ಮಾಡಬಾರದು ಎಂದು ಹೇಳಿದರು.
ಕಾರ್ಮಿಕರ ಸಂಘದ ಸದಸ್ಯತ್ವ ಪಡೆದ ಪ್ರತಿಯೊಬ್ಬರಿಗೂ ಸೌಲಭ್ಯಗಳು ತಲುಪಿಸಲು ಕಾರ್ಮಿಕ ಸಚಿವರೊಂದಿಗೆ ಚರ್ಚಿಸಿ, ಕಾನೂನಿನ ಚೌಕಟ್ಟಿನಲ್ಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ರಾಜನಹಳ್ಳಿ ಮಂಜುನಾಥ ಮಾತನಾಡಿ, 2007ರಲ್ಲೇ ಕಾರ್ಮಿಕರ ಕಲ್ಯಾಣ ಅಭಿವೃದ್ಧಿ ಮಂಡಳಿ ಆರಂಭವಾಗಿದೆ. ಆದರೆ ಕಾರ್ಮಿಕರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಸರ್ಕಾರಗಳು ಕಾರ್ಮಿಕರ ಪರವಾದ ನಿಲುವು ತಾಳಬೇಕು. ಕಾರ್ಮಿಕರ ಅನುದಾನವನ್ನು ಅಸಂಘಟಿತ ವಲಯ ಎನಿಸಿದ ಕಾರ್ಮಿಕರ ಹಿತದೃಷ್ಟಿಯಿಂದ ಕಡಿಮೆ ವೇತನದಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿಗೆ ಹಾಗೂ ಕುಟುಂಬಕ್ಕೆ ನೀಡುವ ಸೇವಾ ಭದ್ರತೆ ಹಣ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಜಿಲ್ಲಾ ಅಧ್ಯಕ್ಷ ಜಿ.ಪಿ. ಪಾಳ್ಳೇದ್, ಶಿಗ್ಗಾಂವಿ ಅಧ್ಯಕ್ಷ ದಾವಲ್‌ಸಾಬ ಕನವಳಿ, ಮಾಲತೇಶ ಮಾಳಗಿಮನೆ, ಬಿ.ಕೆ. ಬಡಿಗೇರ, ರಾಜಾಸಾಬ್ ಕಾರಡಗಿ ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement