ಶೈಕ್ಷಣಿಕ ಪ್ರಗತಿಗೆ ಸರ್ಕಾರ ಬದ್ಧ: ಲಮಾಣಿ
ಹಾವೇರಿ: ಸರ್ಕಾರವು ಶಿಕ್ಷಣದ ಪ್ರಗತಿಗೆ ಬದ್ಧವಾಗಿದ್ದು, ಇದಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಜಿಲ್ಲಾ ಗುರುಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಗುರುವಾರ ಏರ್ಪಡಿಸಿದ್ದ ಶೈಕ್ಷಣಿಕ ಪ್ರೇರಣಾ ಸಮಾವೇಶ ಮತ್ತು ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಅಕ್ಷರ ದಾಸೋಹ, ಕ್ಷೀರ ಭಾಗ್ಯ ಯೋಜನೆಗಳ ಮುಖಾಂತರ ಮಕ್ಕಳನ್ನು ಶಾಲೆಗಳಿಗೆ ಸೆಳೆದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದೆ. ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಪ್ರಮುಖ ಹಂತವಾಗಿದ್ದು, ಫಲಿತಾಂಶ ಸುಧಾರಣೆಗೆ ಶಿಕ್ಷಕರು ಅಗತ್ಯ ಕ್ರಮ ಕೈಗೊಳ್ಳಬೇಕು. ಮಕ್ಕಳಲ್ಲಿರುವ ಪರೀಕ್ಷಾ ಭಯ ನಿವಾರಿಸಿ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.
ಸಾನ್ನಿಧ್ಯ ವಹಿಸಿದ್ದ ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಸ್ವಾಮೀಜಿ ಮಾತನಾಡಿ, ಶಾಲೆಗಳು ಭವಿಷ್ಯತ್ತಿನ ನಾಯಕರನ್ನು ನಿರ್ಮಿಸುವ ಕೇಂದ್ರಗಳಾಗಿದ್ದು, ಎಲ್ಲ ಸವಾಲುಗಳನ್ನು ಎದುರಿಸುವ ರೀತಿಯಲ್ಲಿ ಮಕ್ಕಳನ್ನು ಅಣಿಗೊಳಿಸಲು ಶಿಕ್ಷಕರು ಹೆಚ್ಚು ಶ್ರಮ ವಹಿಸಬೇಕೆಂದು ನುಡಿದರು.
ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಬಿ. ಕೊಡ್ಲಿ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಎಂ.ಡಿ. ಬಳ್ಳಾರಿ ಮಾತನಾಡಿ, ಶಿಕ್ಷರು ಹೆಚ್ಚು ಸಮಯವನ್ನು ಮಕ್ಕಳೊಂದಿಗೆ ಕಳೆಯಬೇಕು. ಎಸ್ಸೆಸ್ಸೆಲ್ಸಿ ಮಕ್ಕಳ ಸಲುವಾಗಿ ಯೋಜನೆ ತಯಾರಿಸಿ, ಅದರಂತೆ ನಡೆದು ಫಲಿತಾಂಶ ಸುಧಾರಣೆಗೆ ಶ್ರಮಿಸಬೇಕೆಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಎಸ್.ಜಿ. ಕೋಟಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಶಿಕ್ಷಕರಿಗೆ ತರಬೇತಿ ನೀಡಿದರು. ಪ್ರಗತಿಪರ ಚಿಂತಕ ನಿಜಲಿಂಗಪ್ಪ ಬಸೇಗಣ್ಣಿ, ಸಮನ್ವಯಧಿಕಾರಿ ಕೆ.ಎಫ್. ಭಜಂತ್ರಿ, ವಿಷಯ ಪರಿವೀಕ್ಷಕ ಆರ್.ಎನ್. ಹುರಳಿ, ಬಸವರಾಜಪ್ಪ, ಎಸ್.ಎಲ್. ಕಾಡದೇವರಮಠ ಇದ್ದರು. ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಸಿ. ಕಲ್ಮನಿ ಸ್ವಾಗತಿಸಿದರು. ದೈಹಿಕ ಶಿಕ್ಷಣಾಧಿಕಾರಿ ಎನ್.ಐ. ಇಚ್ಚಂಗಿ ವಂದಿಸಿದರು. ಕವಿತಾ ಮಠದ ಹಾಗೂ ವಿ.ಎಂ. ಗಡ್ಡದೇವರಮಠ ನಿರೂಪಿಸಿದರು.