ಕಲ್ಯಾಣ ಮಂಡಳಿ ಕಾರ್ಮಿಕರಿಗೆ ವರದಾನ: ನ್ಯಾ. ಚನ್ನಕೇಶವರೆಡ್ಡಿ
ಹಾವೇರಿ: ಅನ್ಯರಿಗೆ ಮನೆಕಟ್ಟಿಕೊಟ್ಟು ತಾವು ಮಾತ್ರ ಸೌಲಭ್ಯಗಳಿಲ್ಲದೆ ಅಸ್ಥಿರ ಬದುಕು ಸಾಗಿಸುತ್ತಿರುವ ಕಟ್ಟಡ ಕಾರ್ಮಿಕರಿಗೆ ವರದಾನವೆಂಬಂತೆ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಿದೆ. ಇದು ಕಟ್ಟಡ ಕಾರ್ಮಿಕರ ಮನೋಸ್ಥೈರ್ಯ ಹೆಚ್ಚಿಸಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ವಿ. ಚನ್ನಕೇಶವರೆಡ್ಡಿ ಹೇಳಿದರು.
ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದಿಂದ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಕಟ್ಟಡ ಕಾರ್ಮಿಕರ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಟ್ಟಡ ಕಾರ್ಮಿಕರು ಆರ್ಥಿಕ ಆಸರೆ ಇಲ್ಲದೆ ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಪ್ರತಿಯೊಬ್ಬ ಕಟ್ಟಡ ಕಾರ್ಮಿಕರ ಜೀವನದಲ್ಲಿ ಸಂಭವಿಸಬಹುದಾದ ಪ್ರತಿಯೊಂದು ಅಪಘಾತಕ್ಕೆ ಸೂಕ್ತ ಪರಿಹಾರ ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾಡುತ್ತಿದೆ. ಇದರ ಸದುಪಯೋಗವನ್ನು ಕಟ್ಟಡ ಕಾರ್ಮಿಕರು ಪಡೆದುಕೊಳ್ಳಬೇಕು ಎಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಎಸ್. ಹೊರಟ್ಟಿ, ವಕೀಲ ಪರಶುರಾಮ ಅಗಡಿ ಮಾತನಾಡಿದರು. ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ರಾಜನಹಳ್ಳಿ ಇದ್ದರು.