ಬೇಡಿಕೆಗೆ ಆಗ್ರಹಿಸಿ ಉಪನ್ಯಾಸಕರ ಧರಣಿ
ಮಡಿಕೇರಿ: ವೇತನ ತಾರತಮ್ಯ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಜಂಟಿ ಕ್ರಿಯಾ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಧರಣಿ ಮುಷ್ಕರ ನಡೆಸಲಾಯಿತು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಡಿ. ರಮಾನಂದ, ಕೊಡಗು ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಜಿಲ್ಲಾ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಸಿ.ಎನ್. ವಿಶ್ವನಾಥ್ ನೇತೃತ್ವದಲ್ಲಿ ಕೊಡಗು ಜಿಲ್ಲೆಯ ವಿವಿಧ ಶಾಲಾ ಕಾಲೇಜು ಉಪನ್ಯಾಸಕರು ಕೋಟೆ ಆವರಣದಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕವಾಗಿ ಮುಷ್ಕರ ನಡೆಸಿದರು.
4 ಮತ್ತು 5ನೇ ವೇತನ ಆಯೋಗದ ಶಿಫಾರಸನ್ನು ಅನುಷ್ಠಾನಗೊಳಿಸುವ ಸಂದರ್ಭ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಕೋರಿ ಕಳೆದ 3 ವರ್ಷಗಳಿಂದ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದರೂ ಸರ್ಕಾರ ನ್ಯಾಯಯುತವಾದ ಬೇಡಿಕೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕ ಸಮುದಾಯಕ್ಕೆ ಗಿರಿಭತ್ಯೆ ನೀಡಬೇಕೆಂದು ಕಳೆದ 5 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ಸರ್ಕಾರ ಈ ಬೇಡಿಕೆಯನ್ನು ಈಡೇರಿಸಿಲ್ಲ. ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಶೇ.5ರಷ್ಟು ಮನೆ ಬಾಡಿಗೆ ಭತ್ಯೆ ಹೆಚ್ಚಿಸಿದ್ದು, ಈ ಸವಲತ್ತನ್ನು ರಾಜ್ಯದ ಇತರೆ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ವಿಸ್ತರಿಸಬೇಕೆಂದು ಧರಣಿ ನಿರತ ಶಿಕ್ಷಕ ವೃಂದ ಒತ್ತಾಯಿಸಿತು.
ಪರೀಕ್ಷಾ ಹಂತಗಳಲ್ಲಿ ಸರ್ಕಾರ ಶಿಕ್ಷಕರನ್ನು ತರಬೇತಿಗೆ ನಿಯೋಜಿಸುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ತಯಾರಿ ಮಾಡಲು ತೊಂದರೆಯಾಗುತ್ತಿದೆ ಈ ಹಿನ್ನಲೆಯಲ್ಲಿ ಡಿಸೆಂಬರ್ ಮಾಸಾಂತ್ಯದೊಳಗೆ ತರಬೇತಿ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಬೇಕೆಂದು ಶಿಕ್ಷಕರು ಒತ್ತಾಯಿಸಿದರು.
ಜಿಲ್ಲಾ ಕಸಾಪ ಅಧ್ಯಕ್ಷ ಟಿ.ಪಿ. ರಮೇಶ್, ಜಿಪಂ ಮಾಜಿ ಅಧ್ಯಕ್ಷೆ ಎಚ್.ಬಿ. ಜಯಮ್ಮ ಪ್ರತಿಭಟನಾ ಸ್ಥಳಕ್ಕೆ ಬಂದು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾ ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಫಿಲಿಪ್ ವಾಸ್, ಮಂಜುನಾಥ್, ಜಿಲ್ಲಾ ಸಮಿತಿಯ ಎಚ್.ಜಿ. ಕುಮಾರ್,ಕೆ.ಬಿ.ಪ್ರಕಾಶ್,ನಾಗರಾಜ್, ಮೆಹಬೂಬ್ ಖಾನ್, ಕಾರ್ಯದರ್ಶಿ ಚಂದ್ರಹಾಸ್ ಗೌಡ, ವಿರಾಜಪೇಟೆ ತಾಲೂಕು ಅಧ್ಯಕ್ಷ ಚಂಗಪ್ಪ, ಕಾರ್ಯದರ್ಶಿ ಎ.ವಿ. ಮಂಜುನಾಥ್ ಇನ್ನಿತರರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.