ಗ್ರಾಮಾಂತರ ಪ್ರದೇಶದಲ್ಲಿ ವ್ಯಾಯಾಮ ಶಾಲೆ ತೆರೆಯಲು ಚಿಂತನೆ: ರಂಜನ್
ಸೋಮವಾರಪೇಟೆ: ಕ್ರೀಡಾಪಟುಗಳ ದೈಹಿಕ ಬಲವರ್ಧನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಗ್ರಾಮಾಂತರ ಪ್ರದೇಶದಲ್ಲಿ ವ್ಯಾಯಾಮ (ಜಿಮ್) ಶಾಲೆಯನ್ನು ಪ್ರಾರಂಭಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಅಪ್ಪಚ್ಚು ರಂಜನ್ ಹೇಳಿದರು.
ಇಲ್ಲಿನ ಸಮೀಪದ ಶುಂಠಿ ಗ್ರಾಮದ ಟೀಮ್ ಶುಂಠಿ ಸ್ಪೋರ್ಟ್ಸ್ ಯೂತ್ ಕ್ಲಬ್ ವತಿಯಿಂದ ಗೌಡಳ್ಳಿಯ ನವದುರ್ಗಾಪರಮೇಶ್ವರಿ ದೇವಾಲಯದ ಜಾತ್ರೋತ್ಸವದ ಅಂಗವಾಗಿ ಗೌಡಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಮುಕ್ತ ಫುಟ್ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯಾಟವನ್ನು ಉದ್ಘಾಟಿಸಿ, ಮಾತನಾಡಿದರು.
ಈಗಾಗಲೇ ಕ್ರೀಡಾ ನೀತಿ ಹಾಗೂ ಯುವ ನೀತಿಯನ್ನು ಜಾರಿಗೆ ತರಲಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಪಾಲ್ಗೊಂಡ ಕ್ರೀಡಾ ಪಟುಗಳಿಗೆ ಉದ್ಯೋಗದಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿ, ಯಶಸ್ಸು ಕಾಣುತ್ತಿರುವ ಕ್ಲಬ್‌ನ ಸಾಧನೆಯನ್ನು ಶ್ಲಾಘಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಜಿ.ಪಂ. ಸದಸ್ಯೆ ಎನ್.ಎಸ್. ಗೀತಾ, ಗೌಡಳ್ಳಿ ಗ್ರಾ.ಪಂ. ಅಧ್ಯಕ್ಷೆ ತೀರ್ಥಾ ಹರೀಶ್, ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಟಾಟೂ ಮೊಣಪ್ಪ, ಟೀಮ್‌ಶುಂಠಿ ತಂಡದ ಅಧ್ಯಕ್ಷ ಎಸ್.ಬಿ. ಜಯಂತ್, ಜೆಡಿಎಸ್ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಸ್.ಬಿ. ಭರತ್, ತಾಲೂಕು ವೈದ್ಯಾಧಿಕಾರಿ ಡಾ. ಚೇತನ್, ದೇವಾಲಯ ಸಮಿತಿ ಅಧ್ಯಕ್ಷ ಎಚ್.ಆರ್. ಮುತ್ತಣ್ಣ, ಎಸ್.ಎನ್. ಪ್ರಥ್ವಿ ಹಾಗೂ ಗುರುಪ್ರಸಾದ್ ಇದ್ದರು. ಪಂದ್ಯಾಟದ ಪಾರಿತೋಷಕಗಳನ್ನು ದಾನಿಗಳಾದ ಎಸ್.ಆರ್. ವರುಣ್ ಮತ್ತು ಎಸ್.ಎಂ. ಕುಮಾರಪ್ಪ ವಿತರಿಸಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.