ಬಿಸಿಯೂಟ, ಹಾಲು ವಿತರಣೆ ಲೋಪ ಕಂಡು ಬಂದರೆ ಕಠಿಣ ಕ್ರಮ: ಸುಬ್ಬಾರೆಡ್ಡಿ
ಬಾಗೇಪಲ್ಲಿ: ಬಿಸಿಯೂಟ ಸೇರಿದಂತೆ ಹಾಲು ವಿತರಣೆಯಲ್ಲಿ ದೋಷಗಳು ಕಂಡು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವಂತಹ ಕ್ಷೀರ ಭಾಗ್ಯ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಹಾಲು ವಿತರಣೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಬರುವವರು ಬಹುತೇಕ ಬಡವರ ಮಕ್ಕಳು, ಪೌಷ್ಟಿಕಾಂಶದ ಕೊರತೆಯಿರುವ ಮಕ್ಕಳಿಗೆ ಜ್ಞಾನ ಕುಂಠಿತಗೊಳ್ಳುತ್ತದೆ ಎಂದು ಅನೇಕ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಗಮನಿಸಿರುವ ರಾಜ್ಯ ಸರ್ಕಾರ ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ವೃದ್ಧಿಸುವ ನಿಟ್ಟಿನಲ್ಲಿ ಅಂಗನವಾಡಿ ಮತ್ತು 1ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬಿಸಿಯೂಟ ಹಾಗೂ ಹಾಲನ್ನು ನೀಡಲಾಗುತ್ತಿದೆ. ಆದರೆ, ಊಟ ಮತ್ತು ಹಾಲನ್ನು ತಯಾರಿಸುವವರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಅಜಾಗರೂಕತೆಗೆ ಹಾಗೂ ನಿರ್ಲಕ್ಷ್ಯಕ್ಕೆ ಮುಗ್ಧ ಮಕ್ಕಳು ಬಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಅವರು.
ಊಟ ಮತ್ತು ಹಾಲನ್ನು ವಿದ್ಯಾರ್ಥಿಗಳಿಗೆ ನೀಡುವ ಮೊದಲು ಉಸ್ತುವಾರಿ ವಹಿಸಿಕೊಂಡಿರುವ ಶಿಕ್ಷಕರು ಇಲ್ಲವೆ ಸಂಬಂಧಪಟ್ಟ ಅಧಿಕಾರಿಗಳು ಸೇವಿಸಿ ನಂತರ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ಓದುವಂತ ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಜಿಲ್ಲೆಯಲ್ಲಿಯೇ ಬಾಗೇಪಲ್ಲಿ ತಾಲೂಕಿನ ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳಗಿಂತ ಸರ್ಕಾರಿ ಶಾಲೆಗಳು ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ರುಜುವಾತುಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶ್ರಮಿಸಬೇಕೆಂದು ಸಲಹೆ ನೀಡಿದ ಅವರು, ನಾನು ಮೊದಲು ಶಿಕ್ಷಣಕ್ಕೆ, ನಂತರ ಎರಡನೆಯದಾಗಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು.
ಜಿ.ಪಂ. ಮಾಜಿ ಉಪಾಧ್ಯಕ್ಷ ಚೆಂಡೂರು ವೆಂಕಟೇಶ್, ಪುರಸಭೆಯ ಸದಸ್ಯರಾದ ಅ.ನ. ಮೂರ್ತಿ, ಇನಾಯುತ್ತುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ವೆಂಕಟೇಶ್ ಭಾಗವಹಿಸಿದ್ದರು.