ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

200ಕ್ಕೂ ಹೆಚ್ಚು ಕಂಪನಿ ಭಾಗಿ

Srinivasa Murthy VN
Updated On : 3 Aug 2013, 12:18 pm

ಚಿಕ್ಕಬಳ್ಳಾಪುರ: ನಗರದ ಹೊರ ವಲಯದಲ್ಲಿರುವ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಆ. 3 ಮತ್ತು 4 ರಂದು
ಜಿಲ್ಲಾಡಳಿತ ಕೈಗೊಂಡಿರುವ  ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೃಹತ್ ಉದ್ಯೋಗ ಮೇಳದ ಪೂರ್ವ ಸಿದ್ಧತೆಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಡಾ.ಎಂ.ವೀರಪ್ಪ ಮೊಯ್ಲಿ ಶುಕ್ರವಾರ ಪರಿಶೀಲನೆ ನಡೆಸಿದರು.
ಎಸ್‌ಜೆಸಿಐಟಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಉದ್ಯೋಗಾಕಾಂಕ್ಷಿಗಳಿಗೆ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಸೂಚನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ
ಅವರು, ಕಳೆದ ಮೂರು ವರ್ಷಗಳಿಂದಲೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳುತ್ತ ಬಂದಿದ್ದು ಬಹಳಷ್ಟು ಮಂದಿ ನಿರುದ್ಯೋಗಿಗಳು ಉದ್ಯೋಗ ಪಡೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಬಾರಿಯು ಬೃಹತ್ ಉದ್ಯೋಗ ಮೇಳವನ್ನು ಯುವಕರು, ಯುವತಿಯರು, ಪದವೀಧರರು ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಉದ್ಯೋಗ ಮೇಳ ದಾರಿ ದೀಪ: ಇಂದಿನ ಆರ್ಥಿಕ ಸಂಕಷ್ಟದಲ್ಲಿ ಈ ಉದ್ಯೋಗ ಮೇಳವು ಹಲವರಿಗೆ ದಾರಿದೀಪವಾಗುತ್ತದೆ. ಉದ್ಯೋಗಾಕಾಂಕ್ಷಿಗಳು ತಮಗೆ ಸೂಕ್ತವಾದ ಉದ್ಯೋಗವನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸುವ ಸಾಮರ್ಥ್ಯವನ್ನು ಗಳಿಸಲಿದ್ದಾರೆ ಎಂದರು.
ಆನ್‌ಲೈನ್ ಮೂಲಕ 25,000 ಅರ್ಜಿ: ಈಗಾಗಲೇ ಈ ಬಾರಿಯ ಉದ್ಯೋಗ ಮೇಳದಲ್ಲಿ ಸುಮಾರು 25,000 ಜನ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ.  ಈ ಬಾರಿ ಎಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಕೊಡಲು ಸುಮಾರು 30 ಕಂಪನಿಗಳು, ಐಟಿ, ಟಿವಿಎಸ್ ಮೋಟಾರ್ಸ್ , ಬ್ರಿಟಾನಿಯಾ, ಓರಾಕಲ್, ಐಬಿಎಂ, ಆದಿತ್ಯ ಬಿರ್ಲಾ ಮುಂತಾದ ಕಂಪನಿಗಳು ಸೇರಿದಂತೆ 200ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದರು.
ಆ.3 ರಂದು ಎಸ್‌ಜೆಸಿಐಟಿ ಕಾಲೇಜಿನಲ್ಲಿ ಬೆಳಗ್ಗೆ 9.30 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿದ್ಯ ವಹಿಸುವರು. ಸಚಿವ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಸಚಿವರಾದ ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ವಿಧಾನಸಭೆ ಉಪಾಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಶಾಸಕ ಡಾ.ಎಂ.ಸುಧಾಕರ್, ಮೋಹನ್ ಆಳ್ವ, ಜಿಲ್ಲಾಧಿಕಾರಿ ಡಾ.ಆರ್.ವಿಶಾಲ್, ಜಿಲ್ಲಾ ಎಸ್‌ಪಿ ಎನ್.ಶಿವಪ್ರಸಾದ್, ಪ್ರಾಂಶುಪಾಲ ಮುನಿಕೆಂಚೇಗೌಡ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement