ದೇವೇಗೌಡರಿಂದ ಕುಟುಂಬ ರಾಜಕಾರಣ
ಕೋಲಾರ: ನಮ್ಮದು ಪ್ರಾದೇಶಿಕ ಪಕ್ಷ, ಜಾತ್ಯತೀತ ಪಕ್ಷವೆಂದು ಹೇಳಿಕೊಳ್ಳುವ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆಂದು ಕೃಷಿ ಸಚಿವ ಕೃಷ್ಣಬೈರೇಗೌಡ ಟೀಕಿಸಿದರು.
ಅವರು ನಗರದ ಹೊರ ವಲಯದ ಟಮಕದಲ್ಲಿನ ತೋಟಗಾರಿಕೆ ಮಹಾವಿದ್ಯಾಲಯದ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ತಮ್ಮನ್ನು ಭೇಟಿಯಾಗಿದ್ದ ಸುದ್ದಿಗಾರರೊಂದಿಗೆ ಮಾತನಾಡಿದರು.
ಜೆಡಿಎಸ್ ವರಿಷ್ಠರಿಗೆ ತಮ್ಮ ಪಕ್ಷದಲ್ಲಿನ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಗುರುತಿಸಿ ಬೆಳೆಸುವುದಕ್ಕೆ ಇಷ್ಟವಿಲ್ಲ. ಹಾಗಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಈ ಕ್ಷೇತ್ರಕ್ಕೆ ಸಂಬಂಧವಿಲ್ಲದ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸುವ ಮೂಲಕ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷವು ಸಹ ಮಾಜಿ ಸಚಿವ, ಹಾಲಿ ಶಾಸಕ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ. ಸುರೇಶ್ ಅವರನ್ನು ಕಣಕ್ಕೆ ಇಳಿಸಿರುವುದು ಕುಟುಂಬ ರಾಜಕಾರಣವಲ್ಲದೇ ಮತ್ತೇನು ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು, ನಮ್ಮ ಪಕ್ಷವು ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೂ ಪಕ್ಷಕ್ಕಾಗಿ ಅನೇಕ ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತನಿಗೆ ಅವಕಾಶ ಕಲ್ಪಿಸಿದೆಯೇ ಹೊರತು ಸ್ವಾರ್ಥಕ್ಕಾಗಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೆಂದು ಸಮರ್ಥಿಸಿಕೊಂಡರು.
ಜೆಡಿಎಸ್ ವರಿಷ್ಠರು ತಮಗೆ ಬೇಕಾದಾಗ ಬಿಜೆಪಿಯನ್ನು ಅಪ್ಪಿಕೊಳ್ಳುತ್ತಾರೆ, ಬೇಡವಾದಾಗ ಬಿಜೆಪಿಯನ್ನು ಕೋಮುವಾದಿ ಪಕ್ಷವೆಂದು ದೋಷಿಸುವ ಮೂಲಕ ದ್ವಂದ್ವ ನಿಲುವು ಅನುಸರಿಸುತ್ತಿದ್ದು ಮತದಾರರು ಜೆಡಿಎಸ್ಗೆ ತಕ್ಕಪಾಠ ಕಲಿಸಲಿದ್ದಾರೆಂದು ಅಭಿಪ್ರಾಯಿಸಿದರು.
ಕಾಂಗ್ರೆಸ್ ಜನಪರವಾಗಿರುವ ಹಾಗೂ ಯಾವುದೇ ವರ್ಗದ ವಿರುದ್ಧ ದ್ವೇಷ ಇಲ್ಲದೇ ಕೆಲಸ ನಿರ್ವಹಿಸುತ್ತಿರುವ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವುದು ಸಾಧಿಸುವುದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.