ನಂದಿಗಿರಿಧಾಮ ಅಭಿವೃದ್ಧಿಗೆ ಹಲವು ಯೋಜನೆ: ಸುಧಾಕರ್
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ವಿದೇಶಿಗರು ಸೇರಿದಂತೆ ವಿವಿಧೆಡೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಇಂತಹ ಗಿರಿಧಾಮದ ಅಭಿವೃದ್ಧಿಗೆ ಹಲವು ಪ್ರಮುಖ ಯೋಜನೆಗಳನ್ನು ಕೈಗೊಂಡು ಮತ್ತಷ್ಟು ಆಕರ್ಷಕ ಸ್ಥಳವನ್ನಾಗಿಸುವುದಾಗಿ ಶಾಸಕ ಡಾ.ಕೆ. ಸುಧಾಕರ್ ತಿಳಿಸಿದರು.
ತಮ್ಮ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ನಂದಿ ಹೋಬಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಂಟಿಯಾಗಿ ನಂದಿ ಬೆಟ್ಟದ ಅಭಿವೃದ್ಧಿಗೆ ಸುಮಾರು 25-30 ಕೋಟಿ ರು. ಅನುದಾನ ನೀಡಲು ಮುಂದೆ ಬಂದಿದ್ದು ಅನುದಾನ ಸದ್ಬಳಕೆ ಮಾಡಿಕೊಂಡು ನಂದಿ ಗಿರಿಧಾಮವನ್ನು ಸಮಗ್ರ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ತಮ್ಮ ಟ್ರಸ್ಟ್ ವತಿಯಿಂದ ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದು ಆರೋಗ್ಯ, ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಒತ್ತು ಕೊಡಲಾಗಿದೆ. ಈಗಾಗಲೇ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್, ನೋಟು ಪುಸ್ತಕಗಳ ವಿತರಣೆ, ಸಹಾಯ ಧನ ನೀಡುವ ಕಾರ್ಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಅಲ್ಲದೇ ತಮ್ಮ ಆರ್ಥಿಕ ಸಮಸ್ಯೆಗಳಿಂದ ಆರೋಗ್ಯದ ಕಡೆಗೆ ಸರಿಯಾಗಿ ಗಮನ ಕೊಡದ ಬಡ ಜನರ ಆರೋಗ್ಯವನ್ನು ಕಾಪಾಡಲು ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನು ಮುಂದುವರೆಸಿಕೊಂಡು ಹೋಗುವುದಾಗಿ ಭರವಸೆ ನೀಡಿದರು.
ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ನಂದಿ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಮೂರ್ತಿ, ಹಾಪ್‌ಕಾಮ್ಸ್ ಉಪಾಧ್ಯಕ್ಷ ಜಿ.ಆರ್. ಶ್ರೀನಿವಾಸ್, ವೇಣುಗೋಪಾಲ್, ಮಲ್ಲಪ್ಪ ಮತ್ತಿತರರು ಹಾಜರಿದ್ದರು.