ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

Rashmi Kasaragodu
Updated On : 15 Aug 2013, 12:54 pm

ಕೋಲಾರ: ಅತಿ ಹೆಚ್ಚು ದಲಿತರು ವಾಸವಾಗಿರುವ ಕೋಲಾರ ಜಿಲ್ಲೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚಿನ ಸವಲತ್ತು ಕಲ್ಪಿಸಿ ದಲಿತರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದುವಂತೆ ಕಾರ್ಯಕ್ರಮ ರೂಪಿಸಬೇಕೆಂದು ಒತ್ತಾಯಿಸಿ ಬುಧವಾರ  ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬೇಡಿಕೆಗಳು: ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಬೇಕು, ಭೂ ಮಂಜೂರಾತಿ ಸಮಿತಿ ರಚಿಸಿ, ಬಾಕಿ ಇರುವ ಎಲ್ಲಾ ಭೂ ಮಂಜೂರಾತಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಜಿಲ್ಲೆಯಲ್ಲಿ ಇರುವ ಎಲ್ಲಾ ವಸತಿ ರಹಿತ ಎಲ್ಲಾ ಜಾತಿಯ ಬಡವರಿಗೆ ಕೂಡಲೇ ವಸತಿ ಸೌಕರ್ಯ ಕಲ್ಪಿಸಬೇಕು, ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾತಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಂಡು ಖಾಲಿ ಇರುವ ಅಡುಗೆಯವರು ಹಾಗೂ ಅಧಿಕಾರಿಗಳನ್ನು ನೇಮಕ ಮಾಡಬೇಕು.ಪುರಸಭೆ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಪ್ರತಿ ವರ್ಷ ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸಬೇಕೆಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘಟನೆಯ ಮುಖಂಡರು ಹಕ್ಕೋತ್ತಾಯ ಪತ್ರವನ್ನು ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ.ವೆಂಕಟೇಶಮೂರ್ತಿ ಅವರಿಗೆ ನೀಡಿ ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡುವಂತೆ ತಿಳಿಸಿದರು.
ಪ್ರತಿಭಟನೆಯಲ್ಲಿ ದಸಂಸ ರಾಜ್ಯ ಸಂಚಾಲಕ ಸತ್ಯಭದ್ರಾವತಿ, ಸಂಘಟನಾ ಸಂಚಾಲಕ ಬಿ.ಎನ್.ಗಂಗಾಧರ್, ಜಿಲ್ಲಾ ಸಂಚಾಲಕ ಸೂಲಿಕುಂಟೆ ರಮೇಶ್, ಜಿಲ್ಲಾ ಸಂಘಟನಾ ಸಂಚಾಲಕ ನಾಗನಾಳ ಮುನಿಯಪ್ಪ, ಎಸ್.ಎಂ.ವೆಂಕಟೇಶ್, ಮಾಕಾರಹಳ್ಳಿ ನಾಗರಾಜ್, ಚವ್ವೇನಹಳ್ಳಿ ಕೆ.ವಿಜಿ ಹಾಗೂ ತಾಲೂಕು ಘಟಕಗಳಿಂದ ವಿವಿಧ ಪದಾಧಿಕಾರಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement