ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು: ಮುನಿಯಪ್ಪ ವಿಶ್ವಾಸ
ಶಿಡ್ಲಘಟ್ಟ: ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರ ಸ್ವಾರ್ಥ ಸಾಧನೆಯಿಂದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮತದಾರರು ಜೆಡಿಎಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಸಚಿವರು ಹರಿಹಾಯ್ದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಜನಪರ ಆಡಳಿತ ನೀಡುತ್ತಿದೆ. ವಿಶೇಷವಾಗಿ ಬಡವರಿಗಾಗಿ ಅನ್ನಭಾಗ್ಯ ಯೋಜನೆ ಹಾಗೂ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಹಾಲು ಪೂರೈಕೆ ಮಾಡುವ ಕ್ಷೀರಭಾಗ್ಯ ಯೋಜನೆ ಜಾರಿಗೊಳಿಸುವ ಜೊತೆಗೆ ಹಾಲು ಉತ್ಪಾದಕರಿಗೆ 4 ಪ್ರೋತ್ಸಾಹಧನ ನೀಡುವ ಕ್ರಾಂತಿಕಾತಿ ಯೋಜನೆಗಳನ್ನು ಜಾರಿಗೊಳಿಸಿದೆ. ಅಲ್ಪಾವಧಿಯಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಪರಿಗಣಿಸಿ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವಾದ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸತತ ಬರಗಾಲ ಎದುರಿಸುತ್ತಿರುವ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಿರುವ ಸಾಧನೆ ಕಾಂಗ್ರೆಸ್ ಕಾರ್ಯಕರ್ತರು ರೈತರಿಗೆ ಮನವರಿಕೆ ಮಾಡಿಕೊಡಬೇಕು. ಮುಂಬರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.
ಈಗಾಗಲೇ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ನಾಯಕರು ಅಡ್ಜೆಸ್ಟ್ಮೆಂಟ್ ರಾಜಕಾರಣ ಮಾಡುವ ಮೂಲಕ ಪಕ್ಷದ ತತ್ವ -ಸಿದ್ಧಾಂತಗಳಿಗೆ ತಿಲಾಂಜಲಿ ಇಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಘಟಕದ ಅಧ್ಯಕ್ಷ ಸನಾಉಲ್ಲಾ, ಕಾಂಗ್ರೆಸ್ ಯುವ ಮುಖಂಡ ಎಂ.ಅಬ್ದುಲ್ ಗಫೂರ್, ಪುರಸಭಾ ಸದಸ್ಯ ಎಸ್.ಬಿ. ಬಾಬು, ತಾಲೂಕು ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಗ್ರಾಮ ಪಂಚಾಯಿತಿಗಳ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು