ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅರ್ಜಿಗಳಿಗೆ ಶೀಘ್ರ ಪರಿಹಾರ: ಸುಧಾಕರ್ ಭರವಸೆ

Rashmi Kasaragodu
Updated On : 18 Aug 2013, 1:11 am

ಚಿಕ್ಕಬಳ್ಳಾಪುರ: ತಾಲೂಕಿನ ನಂದಿ ಹಾಗೂ ದೊಡ್ಡಮರಳಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆ ಶಾಸಕ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಶನಿವಾರ ನಡೆಯಿತು. ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದ ಶಾಸಕರು, ಪಡೆದ ಅರ್ಜಿಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಿ ಶೀಘ್ರ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕನಿಷ್ಠ ಮೂರು ತಿಂಗಳಿಗೊಮ್ಮೆ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ತೆರಳಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡುತ್ತೇನೆ ಎಂದು ಹೇಳಿದರು.
ಗುಡಿಸಲು ರಹಿತ ರಾಜ್ಯ ನಿರ್ಮಾಣ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿವರ್ಷ ರಾಜ್ಯಾದ್ಯಂತ ಮೂರು ಲಕ್ಷ ಮನೆ ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಶೀಘ್ರದಲ್ಲಿ ಯೋಜನೆಗೆ ಚಾಲನೆ ದೊರೆಯಲಿದೆ. ಈಗಾಗಲೇ ಮನೆಯಿರುವವರು ಈ ಯೋಜನೆಯಡಿ ಮತ್ತೊಂದು ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ಅಧಿಕಾರಿಗಳಿಗೆ ಸ್ಥಳೀಯ ಮುಖಂಡರು ಸಹಕಾರ ನೀಡಬೇಕೆಂದರು.
ಪಕ್ಷ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೂರೇ ತಿಂಗಳಲ್ಲಿ ಪ್ರಣಾಳಿಕೆಯಲ್ಲಿ ನೀಡಿದ್ದ ಅನೇಕ ಭರವಸೆಗಳನ್ನು ಈಡೇರಿಸಿದೆ. ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ನೂತನ ಇತಿಹಾಸಕ್ಕೆ ಮುನ್ನುಡಿಯಾಗಿದೆ. ರೈತರ ಸಾಲ ಮನ್ನಾ ಮಾಡಲಾಗಿದೆ. ಪರಿಶಿಷ್ಟ ವರ್ಗ, ಜಾತಿ ಹಾಗೂ ಹಿಂದುಳಿದವರಿಗೆ ಸಾಲ ವಿತರಣೆ ಮಾಡಲು ಮುಂದಾಗಿದೆ. ಈ ಕುರಿತು ಸ್ಥಳೀಯ ಮುಖಂಡರು ಜನರಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.
ಪ್ರತಿ ಬುಧವಾರ ಚಿಕ್ಕಬಳ್ಳಾಪುರದಲ್ಲಿರುವ ಶಾಸಕರ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸುವ ಮೂಲಕ ಜನರ ಅಹವಾಲು ಸ್ವೀಕರಿಸುತ್ತೀದ್ದೇನೆ. ಅಲ್ಲಿಗೆ ಬಂದು ಅರ್ಜಿ ಸಲ್ಲಿಸಲು ಸಾಧ್ಯವಾಗದವರಿಗಾಗಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಭೆ ನಡೆಸಲಿದ್ದೇನೆ ಎಂದರು.
ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ನಂದಿ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್, ದೊಡ್ಡಮರಳಿ ಗ್ರಾ.ಪಂ. ಸದಸ್ಯ ಡಿ.ಎಂ. ಚನ್ನಕೇಶವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರಳಿಕುಂಟೆ ಕೃಷ್ಣಮೂರ್ತಿ, ಮುಖಂಡರಾದ ಟಿ.ಆರ್. ಶ್ರೀನಿವಾಸ್, ರಾಮಸ್ವಾಮಿ, ಸತ್ಯನಾರಾಯಣರೆಡ್ಡಿ, ಲಕ್ಷ್ಮಯ್ಯ, ಸುಧಾ ವೆಂಕಟೇಶ್, ಹಾಲಪ್ಪ, ಸುಮಿತ್ರಮ್ಮ, ಗೋಪಾಲಗೌಡ, ಆಂಜಿನಮ್ಮ, ಮೌಲಬಾಬು, ಮಸೂದ್, ನವಾಜಜ್ಜಾನ್, ಮುನಿಸ್ವಾಮಿ, ಎಸ್.ಕೆ.ಎಲ್. ದ್ಯಾವಣ್ಣ, ಕೊಳವನಹಳ್ಳಿ ಶಿವಣ್ಣ, ಪಿಳ್ಳೇಗೌಡ, ಮಲ್ಲಪ್ಪ, ರೇಷ್ಮೆ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಇತರರು ಇದ್ದರು.
ಅಂತಾರಾಷ್ಟ್ರೀಯ ಮಟ್ಟಕ್ಕೆ ನಂದಿ:
ಇದೇ 23ರಂದು ಪ್ರವಾಸೋದ್ಯಮ ಹಾಗೂ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ನಂದಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಜತೆಗೆ ರಾಜ್ಯದ ಎಲ್ಲಾ ಭಾಗದ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಸಭೆ ಕೂಡ ಗ್ರಾಮದಲ್ಲಿ ನಡೆಯಲಿದೆ ಎಂದು ಶಾಸಕ ಸುಧಾಕರ್ ಹೇಳಿದರು.
ಈ ಸಂದರ್ಭದಲ್ಲಿ ನಂದಿ ಹಾಗೂ ಸುತ್ತಮುತ್ತಲ ಪ್ರವಾಸಿ ತಾಣಗಳನ್ನು ನಂದಿ ಹಿಲ್ಸ್ ಸರ್ಕ್ಯುಟ್ ಎಂದು ಸಮೂಹವಾಗಿ ರೂಪಿಸಿ ಸಮಗ್ರವಾಗಿ ಅಭಿವೃದ್ಧಿ ಪಡಿಸುವ ಯೋಜನೆ ರೂಪಿಸಲಾಗಿದೆ. ಈ ಮೂಲಕ ನಂದಿ ಅಭಿವೃದ್ಧಿಗೆ 40-50 ಕೋಟಿ ಅನುದಾನ ಬಿಡುಗಡೆಯಾಗಲಿದ್ದು, ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಗುರಿ ಹೊಂದಲಾಗಿದೆ. ಸುಸಜ್ಜಿತ ಶಾಲೆ, ಪೊಲೀಸ್ ಠಾಣೆ ಸೇರಿದಂತೆ ಮೂಲ ಸೌಲಭ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement