ಕೆಎಸ್ಸಾರ್ಟಿಸಿ ವಿರುದ್ಧ ಎಬಿವಿಪಿ ಪ್ರತಿಭಟನೆ
ಕ.ಪ್ರ.ವಾರ್ತೆ, ಕೋಲಾರ, ಆ.19
ಕಾಲೇಜು ವಿದ್ಯಾರ್ಥಿಗಳನ್ನು ಬಸ್ಗಳಳ್ಲಿ ಹತ್ತಿಸಿಕೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಚಾಲಕರು ಹಾಗೂ ನಿರ್ವಾಹಕರು ಉದ್ದೇಶಪೂರ್ವಕವಾಗಿಯೇ ನಿರಾಕರಿಸಿ, ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ಸೋಮವಾರ ಪ್ರತಿಭಟಿಸಿತು.
ನಗರದ ಬೈಪಾಸ್ ಬಳಿಯ ಬಿಜಿಎಸ್ ಕಾಲೇಜಿನ ವಿದ್ಯಾರ್ಥಿಗಳನ್ನು ಸರ್ಕಾರಿ ಬಸ್ಗಳಲ್ಲಿ ಹತ್ತಿಸಿಕೊಳ್ಳುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಕಾಲೇಜು ವೇಳೆಯಲ್ಲಿ ನಗರ ಸಾರಿಗೆ ಬಸ್ಗಳ ವ್ಯವಸ್ಥೆಯನ್ನೂ ಮಾಡದೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ಗಳಲ್ಲಿ ಸ್ಟಾಪ್ಗಳಲ್ಲಿ ನಿಲ್ಲಿಸಬೇಕೆಂದು ಅನೇಕ ಬಾರಿ ಮನವಿ ಮಾಡಿದ್ದರೂ, ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದ ವಿದ್ಯಾರ್ಥಿಗಳು ಬೈಪಾಸ್ ರಸ್ತೆಯ ಮೇಲ್ಸೇತುವೆ ಕೆಳಗಿನ ರಸ್ತೆಯಲ್ಲಿ ಪ್ರತಿಭಟಿಸಿದರು.
ಬೈಪಾಸ್ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಗಳು ಸಾರಿಗೆ ಸಂಸ್ಥೆಯ ಡಿಟಿಒಗೆ ಕರೆಮಾಡಿ ಪ್ರತಿಭಟನೆಯ ವಿಚಾರ ತಿಳಿಸಿದಾಗ ಸದರಿ ಅಧಿಕಾರಿ ಸ್ಥಳಕ್ಕೆ ಬಾರದೆ ಉದ್ಧಟತನ ತೋರಿದ್ದಾರೆಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ರಸ್ತೆ ತಡೆ ನಡೆಸಿದರು.
ವಾಗ್ವಾದಕ್ಕಿಳಿದ ಅಧಿಕಾರಿಗಳು: ಬಹು ಹೊತ್ತಿನ ನಂತರ ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸುವ ಬದಲಾಗಿ, ಅವರೊಟ್ಟಿಗೆ ವಾಗ್ವಾದ ನಡೆಸಿದರು. ವಿದ್ಯಾರ್ಥಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರಿಂದ ಪ್ರತಿಭಟನೆಯ ಕಾವು ಮತ್ತಷ್ಟು ಹೆಚ್ಚಾಯಿತು.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ಯಲು ಯತ್ನಿಸಿದಾಗ ಸಮಸ್ಯೆ ಮತ್ತಷ್ಟು ಜಟಿಲವಾಯಿತು. ಇದೇ ಸಮಯಕ್ಕೆ ಡಿಸಿಐಬಿ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಯನ್ನು ತಾಳ್ಮೆಯಿಂದ ಕೇಳಿ ಅವರನ್ನು ಸಮಾಧಾನ ಮಾಡಿದರು. ಸ್ಥಳದಲ್ಲಿ ಉಪಸ್ಥಿತರಿದ್ದ ಸಾರಿಗೆ ಅಧಿಕಾರಿಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ನಿಲುಗಡೆ ಮಾಡಿಕೊಡಿ ಎಂದು ಹೇಳಿದರು.
ಮಂಗಳವಾರ ಸಂಸ್ಥೆ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಸಹಕರಿಸುವುದಾಗಿ ನಾರಾಯಣಸ್ವಾಮಿ ಭರವಸೆ ನೀಡಿದ್ದರಿಂದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆರ್.ಎನ್.ಮುರಳಿ, ನಗರ ಕಾರ್ಯದರ್ಶಿ ಹರೀಶ್ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.