ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ; ಆಕ್ರೋಶ
ಚಿಕ್ಕಬಳ್ಳಾಪುರ: ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಮೂರು ತಿಂಗಳ ಮಗು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಮೃತ ಮಗುವಿನ ಸಂಬಂಧಿಕರು ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಮಗುವಿನ ಸಾವಿಗೆ ಸಮರ್ಪಕವಾಗಿ ಚಿಕಿತ್ಸೆ ನೀಡದ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆಯ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ ಘಟನೆ ನಡೆದಿದೆ.
ಗುಂಪಾಗಿ ಬಂದ ಜನ, ಆಸ್ಪತ್ರೆಗೆ ಮುತ್ತಿಗೆ ಹಾಕಿ ಗಲಾಟೆ ಮಾಡಿದ ಹಿನ್ನೆಲೆಯಲ್ಲಿ ಕೆಲ ಸಮಯ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸಕಾಲದಲ್ಲಿ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ತಾಲೂಕಿನ ತಮ್ಮನಾಯಕನಹಳ್ಳಿ ಗ್ರಾಮದ ವನಿತಾ ಮತ್ತು ಸುರೇಶ್‌ಕುಮಾರ್ ದಂಪತಿಗಳ ಮೂರು ತಿಂಗಳ ಮಗುವು ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದು ಸೋಮವಾರ ರಾತ್ರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಮಂಗಳವಾರ ಮಧ್ಯಾಹ್ನ ಮೃತಪಟ್ಟಿದೆ. ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.
ವೈದ್ಯರ ಸ್ಪಷ್ಟನೆ: ನ್ಯುಮೋನಿಯಾ ಕಾಯಿಲೆಗೆ ತುತ್ತಾಗಿದ್ದ ಮಗುವಿಗೆ ಶಾಸ್ವಕೋಶದ ತೊಂದರೆಯಿಂದ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಆಕ್ಸಿಜನ್ ಹಾಕಿ, ಮಗುವಿನ ಆರೋಗ್ಯದ ಸ್ಥಿತಿಗತಿಗಳನ್ನು ನೋಡಿಕೊಳ್ಳಲಾಗುತ್ತಿತ್ತು. ಆದರೆ, ಮಂಗಳವಾರ ಬೆಳಗ್ಗೆ ವಿಷಮ ಪರಿಸ್ಥಿತಿಗೆ ಹೋಗಿ ಮಗು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ.
ಇದರಲ್ಲಿ ವೈದ್ಯರ ನಿರ್ಲಕ್ಷ್ಯವೇನು ಇಲ್ಲ ಎಂದು ತಿಳಿದು ಬಂದಿದೆ. ಆದರೂ ಪ್ರಕರಣದ ಬಗ್ಗೆ ಮಾಹಿತಿ ನೀಡಲು ಸೂಚಿಸಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.