ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೊಲೆ ಆರೋಪಿ ಸೆರೆಗೆ ಒತ್ತಾಯ:ನಾಲ್ಕನೇ ದಿನಕ್ಕೆ ಪ್ರತಿಭಟನೆ

Vishwanath S
Updated On : 24 Aug 2013, 1:13 am

ಕ.ಪ್ರ.ವಾರ್ತೆ ,  ಕೋಲಾರ ,  ಆ.23
ವರದಕ್ಷಿಣೆ ಕಿರುಕುಳ ನೀಡಿ ತಾಯಿ ಮತ್ತು ಮಗುವನ್ನು ಕೊಲೆ ಮಾಡಿದ ಆರೋಪಿಗಳನ್ನು ಶೀಘ್ರ ಬಂಧಿಸದಿದ್ದರೆ, ರಾಜ್ಯ ಮಟ್ಟದಲ್ಲಿ ಹೋರಾಟ ರೂಪಿಸಲಾಗುವುದು ಎಂದು ಸಿಪಿಐ (ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಎಚ್ಚರಿಕೆ ನೀಡಿದರು.
ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿ ಜೆಎಂಎಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶುಕ್ರವಾರ ಆಗಮಿಸಿದ್ದ ಶ್ರೀರಾಮರೆಡ್ಡಿ ಅವರು ನೊಂದ ಕುಟುಂಬದವರಿಂದ ಮಾಹಿತಿ ಪಡೆದು, ನಂತರ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು.
ಕಳೆದ ಹತ್ತು ವರ್ಷಗಳಿಂದೀಚೆಗೆ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು, ಅತ್ಯಾಚಾರ, ಕೊಲೆ, ವರದಕ್ಷಿಣೆ ಕಿರುಕುಳಗಳು ಹೆಚ್ಚಾಗುತ್ತಿರುವುದು ನಾಗರಿಕ ಸಮಾಜ ತಗ್ಗಿಸುವಂತಾಗಿದೆ. ಹಲವಾರು ಪ್ರಕರಣಗಳಲ್ಲಿ ರಾಜಕೀಯ ಹಿತಾಸಕ್ತಿಗಳು ಮತ್ತು ಬಲಾಢ್ಯರ ಒತ್ತಡಕ್ಕೆ ಮಣಿದು ಪೊಲೀಸರು ಕ್ರಮ ಕೈಗೊಳ್ಳದೇ ಜಾಣ ಕುರುಡುತನ ವಹಿಸುತ್ತಿದ್ದಾರೆ. ಇದರಿಂದಾಗಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಮರುಕಳಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಎರಡು ವರ್ಷದ ಎಳೆಯ ಕೂಸು ಮತ್ತು ತಾಯಿಯನ್ನು ಹಾಡಹಗಲೇ ಕೊಂದಿರುವುದು ಹೇಯ ಕೃತ್ಯ. ಘಟನೆ ನಡೆದು 44 ದಿನಗಳು ಕಳೆದರೂ ಇದುವರೆಗೆ ಆರೋಪಿಗಳನ್ನು ಬಂಧಿಸದಿರುವುದಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದರು. ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ, ಜೆಎಂಎಸ್ ಜಿಲ್ಲಾ ಕಾರ್ಯದರ್ಶಿ ವಿ.ಗೀತಾ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ವಿಜಯಕೃಷ್ಣ, ಎಸ್.ಎಫ್.ಐ ಜಿಲ್ಲಾಧ್ಯಕ್ಷ ವಿ.ಅಂಬರೀಷ್, ಕಾರ್ಯದರ್ಶಿ ವಾಸುದೇವರೆಡ್ಡಿ, ರೈತ ಸಂಘದ ಮುಖಂಡ ಗಂಗಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement