ಹೊಸ ಖಾಸಗಿ ಶಾಲಾ-ಕಾಲೇಜಿಗೆ ಅನುಮತಿ ಬೇಡ
ಕೋಲಾರ: ರಾಜ್ಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಾಯಿಕೊಡೆಗಳಂತೆ ತಲೆ ಎತ್ತಲು ರಾಜ್ಯ ಸರ್ಕಾರವೇ ಕಾರಣ ಎಂದು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಜಿಲ್ಲಾಧ್ಯಕ್ಷ ಮುನಿಯಪ್ಪ ಆರೋಪಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಸೇವಾ ಮನೋಭಾವನೆಯಿಂದ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಿಕ್ಷಣ ಸಂಸ್ಥೆಗಳನ್ನು ತುಳಿಯುವ ಹುನ್ನಾರ ನಡೆಸುತ್ತಿರುವುದಲ್ಲದೆ, ಕಾನೂನು ಬಾಹಿರವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಾಲಾ-ಕಾಲೇಜುಗಳನ್ನು ತೆರೆಯಲು ಅನುಮತಿ ನೀಡುತ್ತಿದೆ ಎಂದು ದೂರಿದರು.
ಸರ್ಕಾರ ಒತ್ತಡಗಳಿಗೆ ಮಣಿದು ಖಾಸಗಿ ಶಿಕ್ಷಣ ಸಂಸ್ಥೆಗಳ ಆರಂಭಕ್ಕೆ ಅನುಮತಿ ನೀಡುತ್ತಿರುವುದರಿಂದ ಅನೇಕ ಹಳೆಯ ಹಾಗೂ ಪ್ರಾಮಾಣಿಕವಾಗಿ ನಡೆಯುತ್ತಿರುವ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿದೆ. ಹೊಸ ಸಂಸ್ಥೆಗಳಿಗೆ ಅವಕಾಶ ನೀಡುವ ಮೂಲಕ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವ ಯತ್ನ ಸರ್ಕಾರದ್ದಾಗಿದೆ. ಕನಿಷ್ಠ 5 ವರ್ಷ ಯಾವುದೇ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡದಿದ್ದ ಪಕ್ಷದಲ್ಲಿ ಅನೇಕ ವರ್ಷಗಳಿಂದ ಕಷ್ಟಪಟ್ಟು ನಡೆಸುತ್ತಿರುವ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜೀವ ತುಂಬಿದಂತಾಗುತ್ತದೆ ಎಂದರು.
ಸಂಘದ ಕಾರ್ಯದರ್ಶಿ ಸದಾನಂದ ಮಾತನಾಡಿ, ಕೇಂದ್ರ ಸರ್ಕಾರ ಸರ್ವ ಶಿಕ್ಷಣ ಅಭಿಯಾನದ ಅನುಷ್ಠಾನಕ್ಕಾಗಿ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದೆ. ಈ ಹಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ವಿದ್ಯಾರ್ಥಿಗೆ ತಲಾ 11840ನ್ನು ಅನುಮತಿ ಹೊಂದಿರುವ ಹಾಗೂ ಪರವಾನಗಿ ನವೀಕರಣಗೊಳ್ಳುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಪಾವತಿ ಮಾಡಿದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ನಾವು ಸಹ ಸರ್ಕಾರದ ಸೂಚನೆಯಂತೆ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಬದ್ಧ. ಹಾಗೆಯೇ ಶಿಕ್ಷಕರಿಗೆ ಕನಿಷ್ಠ ವೇತನ ನೀಡಲು ಸಾಧ್ಯವಿದೆ ಎಂದರು.
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳ ಪರವಾನಗಿ ನವೀಕರಣದ ಕಡತಗಳನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಉದ್ದೇಶವೂರ್ವಕವಾಗಿ ವಿಲೇವಾರಿ ಮಾಡುತ್ತಿಲ್ಲ. ಸೆಂಟರ್‌ಕೋಡ್ ನೆಪದಲ್ಲಿ ಅನಗತ್ಯ ಕಿರುಕುಳ ನೀಡುತ್ತಿರುವುದರಿಂದ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಉಂಟಾಗುತ್ತದೆ ಎಂದರು.
ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಎಸ್‌ಡಿಎಂಸಿಗಳ ರಚನೆ ಮಾಡುವಂತೆ ಹೇಳಿರುವುದು ಸೂಕ್ತವಲ್ಲ. ಪ್ರತಿ ಖಾಸಗಿ ಶಾಲೆಯಲ್ಲಿ 7ರಿಂದ 10 ಮಂದಿ ಆಡಳಿತ ಮಂಡಳಿಯ ಸದಸ್ಯರು ಇರುವಾಗ ಪ್ರತ್ಯೇಕವಾಗಿ ಎಸ್‌ಡಿಎಂಸಿ ರಚನೆ ಅಗತ್ಯವಿಲ್ಲ ಎಂದರು. ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಫಲಿತಾಂಶವಿದ್ದರೂ ಸರ್ಕಾರ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುವ ಖಾಸಗಿ ಶಾಲೆಗಳನ್ನು ಮುಚ್ಚಬೇಕೆಂದು ಆದೇಶ ಹೊರಡಿಸಿರುವುದು ನ್ಯಾಯ ಸಮ್ಮತವಲ್ಲ.
ಈ ರೀತಿಯ ಪರಿಸ್ಥಿತಿಗೆ ಸರ್ಕಾರದ ಅವೈಜ್ಞಾನಿಕ ನಿರ್ಧಾರಗಳೇ ಕಾರಣವಾಗಿರುವುದರಿಂದ ಮೊದಲು ಹೊಸ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಿರುವುದನ್ನು ಹಿಂದಕ್ಕೆ ಪಡೆಯಲಿ ಎಂದು ಒತ್ತಾಯಿಸಿದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ಸಲಹೆಗಾರ ಶ್ರೀಕೃಷ್ಣ, ತಾಲೂಕು ಸಂಘದ ಅಧ್ಯಕ್ಷ ಜೋಸೆಫ್ ಹಾಗೂ ಕಾರ್ಯದರ್ಶಿ ಜಗದೀಶ್ ಇದ್ದರು.