ಶಿಥಿಲಾವಸ್ಥೆಯಲ್ಲಿ ಕುಡಿವ ನೀರಿನ ಪೈಪ್ಲೈನ್ಗಳು
ಚಿಕ್ಕಬಳ್ಳಾಪುರ: ಹಲವೆಡೆ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ಲೈನುಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕಲುಷಿತ ನೀರು ಸೇರ್ಪಡೆಯಾಗುತ್ತಿದ್ದು ಇದನ್ನು ಸೇವಿಸಿ ಜನರು ಕಾಲರಾ, ಜಾಂಡೀಸ್, ಟೈಪಾಯಿಡ್ ಕಾಯಿಲೆಗಳಿಗೆ ತುತ್ತಾಗಿ ತೊಂದರೆ ಅನುಭವಿಸುತ್ತಿರುವಂತಹ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಿಗೆ ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ಪೈಪ್ಲೈನುಗಳನ್ನು ಸರಿಪಡಿಸಬೇಕು. ಮಲಿನ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಂಗಸ್ವಾಮಿ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ಗುಡಿಬಂಡೆ ತಾಲೂಕಿನ ನಲ್ಲಕದಿರೇನಹಳ್ಳಿ ಸೇರಿದಂತೆ ಹಲವೆಡೆ ಕಲುಷಿತ ನೀರು ಸೇವಿಸಿ ಅನೇಕ ಮಂದಿ ಅಸ್ವಸ್ಥಗೊಂಡರು. ಇದರಲ್ಲಿ 50ಕ್ಕೂ ಹೆಚ್ಚು ಮಂದಿಗೆ ಕಾಲರಾ ಕಾಯಿಲೆಗೆ ತುತ್ತಾಗಿರುವುದು ದೃಢಪಟ್ಟಿದ್ದು ಪ್ರಮುಖವಾಗಿ ಕಾಯಿಲೆಗಳು ಹರಡದಿರಲು ಸಮರ್ಪಕವಾಗಿ ಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ತಿಳಿಸಿದರು. ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಮಾತನಾಡಿ, ಇತ್ತೀಚೆಗೆ ಸಾಂಕ್ರಾಮಿಕ ಕಾಯಿಲೆಗಳು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಹರಡುತ್ತಿದ್ದು ಅನೇಕರು ಕಾಯಿಲೆ ಪೀಡಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಯಿಲೆಗಳು ಹರಡದಂತೆ ಎಚ್ಚರಿಕೆ ವಹಿಸಬೇಕು. ಅಗತ್ಯವಿದ್ದಲ್ಲಿ ಇತರೆ ಇಲಾಖೆಗಳ ಸಹಕಾರ ಪಡೆದುಕೊಳ್ಳಬೇಕೆಂದು ಒತ್ತಾಯಿಸಿದರು.
ಇದಕ್ಕೆ ಧ್ವನಿಗೂಡಿಸಿದ ಜಿಪಂ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ, ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡದಿದ್ದರೆ ಭಾರಿ ಸಮಸ್ಯೆ ಉಂಟಾಗುತ್ತದೆ. ಮುಂದೆ ತೊಂದರೆ ಅನುಭವಿಸುವುದರ ಬದಲು ಈಗಲೇ ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎಂದರು.
ಪ್ರಭಾರಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕೃಷ್ಣಪ್ಪ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಆದರೆ ಈಗ ಬ್ಯಾಂಕ್ ಖಾತೆಯ ಸಮಸ್ಯೆಯ ಉದ್ಭವವಾಗಿದೆ.
ಕಳೆದ ಆರು ತಿಂಗಳಿಂದ ಖಾತೆ ನಿರ್ವಹಣೆಯಿಲ್ಲ ಎಂದು ವಿದ್ಯಾರ್ಥಿಗಳ ಖಾತೆಗೆ ಹಣವನ್ನು ಜಮಾ ಮಾಡಲು ಬ್ಯಾಂಕಿನ ಅಧಿಕಾರಿಗಳು ನಿರಾಕರಿಸುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗದಿರಲು ಖಾತೆಗೆ ಹಣ ಜಮಾ ಮಾಡಿಕೊಳ್ಳುವಂತೆ ಸೂಚನೆ ನೀಡಬೇಕಾಗಿದೆ ಎಂದು ಕೋರಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.