ಬಿಜೆಪಿ ಸರ್ಕಾರದ ಸಾಧನೆ ಜನರಿಗೆ ತಿಳಿಸಿ
ಕ.ಪ್ರ. ವಾರ್ತೆಕೋಲಾರಆ.29
ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನಪ್ರಿಯ ಯೋಜನೆಗಳಾದ ಭಾಗ್ಯಲಕ್ಷ್ಮಿ, ಸೈಕಲ್ ವಿತರಣೆ, ಸಂದ್ಯಾ ಸುರಕ್ಷಾ ಇನ್ನಿತರೆ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಜಿಲ್ಲೆಯಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಸಂಘಟಿಸಿ ಎಂದು ವಿಧಾನಪರಿಷತ್ ಸದಸ್ಯ ಡಾ.ಎ.ಎಚ್. ಶಿವಯೋಗಿಸ್ವಾವು ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಪ್ರಥಮ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡುತ್ತಾ ಜಿಲ್ಲೆಯಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ಮಾಡಬೇಕೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳು ಸ್ವಾಮಿ ವಿವೇಕಾನಂದರ 150ನೇ ವರ್ಷದ ಜಯಂತಿ ಅಂಗವಾಗಿ ಸೆ.22 ಬೆಳಿಗ್ಗೆ ಭಾರತ್ ದೌಡ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮತ್ತು ಲೋಕಸಭಾ ಚುನಾವಣೆಯ ಬಗ್ಗೆ ಕಾರ್ಯತಂತ್ರ ನಡೆಸಲು ಚರ್ಚಿಸಲಾಯಿತು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ, ಜಿಲ್ಲಾ ವಕ್ತಾರ ಶಿಳ್ಳಂಗೆರೆ ಮಹೇಶ್, ಬಿಬಿಎಂಪಿ ಸದಸ್ಯ ಹಾಗೂ ಪಕ್ಷದ ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುತ್ತಿರುವ ಶಿವಕುಮಾರ್, ಎಸ್.ಸಿ, ಎಸ್.ಟಿ. ರಾಷ್ಟ್ರ ಕಾರ್ಯಕಾರಣಿ ಸದಸ್ಯ ವೆಂಕಟೇಶ್ ಮೌರ್ಯ, ರಂಗಪ್ಪ ನವರ್, ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನ, ವಿಧಾನಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಓಂಶಕ್ತಿ ಚಲಪತಿ ಇನ್ನಿತರರು ಇದ್ದರು.
ಮುಖಂಡರಾದ ವಕೀಲ ಮಾಗೇರಿ ನಾರಾಯಣಸ್ವಾಮಿ ಸ್ವಾಗತಿಸಿ, ಟಿ.ಎಸ್. ನಾಗಪ್ರಕಾಶ್ ವಂದಿಸಿದರು.